ಮಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎಪಿಎಲ್ ಕುಟುಂಬಗಳಿಗೂ ಹೆಚ್ಚಿನ ಸರ್ಕಾರಿ ನೆರವು ನೀಡಲು ಚಿಂತನೆ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ಬಳಿಕ ಮಾತನಾಡಿದರು.
ಬಿಪಿಎಲ್ ಕಾರ್ಡುದಾರರಿಗೆ ಈಗಾಗಲೇ ಸಂಪೂರ್ಣ ಉಚಿತ ಚಿಕಿತ್ಸೆ ಸೌಲಭ್ಯ ಲಭ್ಯವಿದೆ. ಪ್ರಸ್ತುತ ಎಪಿಎಲ್ ಕಾರ್ಡುದಾರರಿಗೆ ಚಿಕಿತ್ಸಾ ವೆಚ್ಚದಲ್ಲಿ ಸರ್ಕಾರದ ಪಾಲು ಚಿಕಿತ್ಸಾ ವೆಚ್ಚದ 30 ಶೇಕಡ ಇದ್ದು, ಅದನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಚಿಂತನೆ ಇದೆ. ಹಿಂದೆ ನಾನು ಆರೋಗ್ಯ ಸಚಿವನಾಗಿದ್ದಾಗ ಶೇ.70 ರಷ್ಟು ಸರ್ಕಾರದ ಪಾಲು ಇತ್ತು. ಮತ್ತೆ ಹಾಗೇ ನೀಡುವ ಬಗ್ಗೆ ಚಿಂತನೆ ಇದೆ. ಇದು ಪ್ರಾಥಮಿಕ ಹಂತದಲ್ಲಿದ್ದು, ಮುಂದೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಎಪಿಎಲ್ ಕುಟುಂಬಗಳ ಮೇಲಿನ ವೈದ್ಯಕೀಯ ವೆಚ್ಚದ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಹೆಚ್ಚಿನ ನೆರವು ನೀಡುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದರು.
ಬಿಪಿಎಲ್ ಕುಟುಂಬದವರು ಯೋಜನೆಯಡಿ ಚಿಕಿತ್ಸೆ ಪಡೆದಾಗ ಯಾವುದೇ ಖಾಸಗಿ ಆಸ್ಪತ್ರೆಯು ರೋಗಿಯಿಂದ ಹಣ ಪಡೆಯಲು ಅವಕಾಶವಿಲ್ಲ. ಹಣ ಕೇಳಿದರೆ ಆರೋಗ್ಯ ಮಿತ್ರರ ಮೂಲಕ ದೂರು ನೀಡಬಹುದು. ಅಂತಹ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು. ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆಯನ್ನು ನಿವಾರಿಸಲು ಹೊಸ ಕ್ರಮಗಳ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದ್ದು, ದುರ್ಗಮ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಹೆಚ್ಚುವರಿ ಪ್ರೋತ್ಸಾಹಧನ (ಇನ್ಸೆಂಟಿವ್) ನೀಡುವ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಸರ್ಕಾರ ಕಳೆದ ಕೆಲವು ವರ್ಷಗಳಲ್ಲಿ ಹಲವು ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಿದ್ದು, ವೈದ್ಯರ ಸಂಖ್ಯೆಯೂ ಹೆಚ್ಚಾಗಿದೆ. ಆದಾಗ್ಯೂ ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವೈದ್ಯರು ಮುಂದೆ ಬಾರದಿರುವುದು ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಹೆಚ್ಚುವರಿ ಆರ್ಥಿಕ ಪ್ರೋತ್ಸಾಹ ನೀಡುವ ಮೂಲಕ ಅವರನ್ನು ಆಕರ್ಷಿಸುವ ಬಗ್ಗೆ ಚಿಂತನೆ ಇದೆ ಎಂದು ಸಚಿವರು ಹೇಳಿದರು.








