ಬಳ್ಳಾರಿ : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರವೇ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು.
ರಾಜ್ಯ ಸರ್ಕಾರವು ಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು.
ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.