ಬೆಂಗಳೂರು : ರಾಜ್ಯ ಸರ್ಕಾರವು ಪ್ರೌಢಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ಉಪನ್ಯಾಸಕರ ಹುದ್ದೆ ಬಡ್ತಿಗೆ ಕನಿಷ್ಠ ಅಂಕ ಪರಿಷ್ಕರಣೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ಹುದ್ದೆಗೆ ಬಡ್ತಿ ಹೊಂದಲು ಪ್ರೌಢಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯಲ್ಲಿ ಶೇ.55 ರಷ್ಟು ಅಂಕಗಳನ್ನು ನಿಗದಿಪಡಿಸಿರುವುದನ್ನು ಪರಿಷ್ಕರಿಸಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಒಪ್ಪಿಗೆ ನೀಡಲಾಗಿದೆ.
ಇನ್ನೂ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನಲ್ಲೂ ಅರ್ಜಿ ಸಲ್ಲಿಸಲು ಒಂದು ಬಾರಿಗೆ ವಯೋಮಿತಿ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.