ನವದೆಹಲಿ: ನರೇಂದ್ರ ಮೋದಿರವರು ಸಿಬ್ಬಂದಿ ಆಯ್ಕೆ ಆಯೋಗ ಮತ್ತು ಇತರ ನೇಮಕಾತಿ ಏಜೆನ್ಸಿಗಳ ಮೂಲಕ ವಿವಿಧ ಇಲಾಖೆಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ಸಿಬ್ಬಂದಿಗಳನ್ನು ಉದ್ದೇಶಿಸಿ 22 ಅಕ್ಟೋಬರ್ 2022 ರಂದು ಬೆಳಿಗ್ಗೆ 11.00 ಗಂಟೆಗೆ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ರಾಷ್ಟ್ರೀಯ ನೇಮಕಾತಿ ಮಿಷನ್ -1 ಇದರ ಅಂಗವಾಗಿ ನಡೆಯಲಿದೆ. ಈ ಕಾರ್ಯಕ್ರಮವು ವರ್ಚುವಲ್ ಮೋಡ್ ಮೂಲಕ ರಾಷ್ಟ್ರವ್ಯಾಪಿ ನಡೆಯಲಿದೆ. ಭಾರತದಾದ್ಯಂತ ವಿವಿಧ ಇಲಾಖೆಗಳಿಗೆ ಸುಮಾರು 75,000 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.
ಈ ಕಾರ್ಯಕ್ರಮವು ದೇಶದಾದ್ಯಂತ 50 ಕಡೆಗಳಲ್ಲಿ ನಡೆಯುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಾಗುತ್ತದೆ. ಬೆಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು ಅಂಚೆ ಇಲಾಖೆಯು ಹಮ್ಮಿಕೊಂಡಿದ್ದು, ಗೃಹ ಇಲಾಖೆ, ಕಂದಾಯ ಇಲಾಖೆ, ರಕ್ಷಣಾ ಇಲಾಖೆ, ಹಣಕಾಸು ಸೇವೆಗಳ ಇಲಾಖೆ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು ಈ ಬೃಹತ್ ನೇಮಕಾತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ.
ಬೆಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿಗಳ ಸಚಿವರಾದ ಪ್ರಲ್ಹಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ಜ್ಞಾನ ಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜು ಕ್ಯಾಂಪಸ್, 11, ಅರಮನೆ ರಸ್ತೆ, ಬೆಂಗಳೂರು – 560 001 ನಲ್ಲಿ 22 ಅಕ್ಟೋಬರ್ 2022 ರಂದು ಬೆಳಿಗ್ಗೆ 10.30 ಗಂಟೆಗೆ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿಗಳ ಭಾಷಣದ ನೇರ ಪ್ರಸಾರವನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ.
ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಸಚಿವಾಲಯಗಳಿಗೆ ಹೊಸದಾಗಿ ಆಯ್ಕೆಯಾದ ಹಲವು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರವನ್ನು ಮಾನ್ಯ ಸಚಿವರು ಮತ್ತು ಗಣ್ಯರು ಹಸ್ತಾಂತರಿಸಲಿದ್ದಾರೆ.