ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 310 ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆದು 265 ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. 540 ಅರಣ್ಯ ರಕ್ಷಕರ ಮತ್ತು ಇನ್ನಿತರ ಉದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.
ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ಭೀಮಗಢ ಅರಣ್ಯದೊಳಗೆ ಹಲವು ದಶಕಗಳಿಂದ ವಾಸಿಸುತ್ತಿದ್ದ 27 ಕುಟುಂಬಗಳು ಸ್ವಯಂ ಪ್ರೇರಿತವಾಗಿ ಅರಣ್ಯದಿಂದ ಹೊರಬಂದು ಮುಖ್ಯವಾಹಿನಿಗೆ ಸೇರಲು ಬಯಸಿದ ಹಿನ್ನೆಲೆಯಲ್ಲಿ. ಪ್ರತಿ ಕುಟುಂಬ ಘಟಕಕ್ಕೆ ತಲಾ 15 ಲಕ್ಷ ರೂ. ಹಣವನ್ನು ರಾಜ್ಯ ಕಾಂಪಾನಿಧಿಯಿಂದ ನೀಡಿ ಸ್ಥಳಾಂತರ ಮಾಡಲಾಗುತ್ತಿದ್ದು, ಇತ್ತೀಚೆಗೆ ಪ್ರಥಮ ಕಂತಿನ 10 ಲಕ್ಷ ರೂ. ಚೆಕ್ ಅನ್ನು ವಿತರಿಸಲಾಗಿದೆ. ಹುಲಿ ಸಂರಕ್ಷಿತ ಪ್ರದೇಶವಲ್ಲದ ಅರಣ್ಯದಲ್ಲಿ ನಡೆದ ಪ್ರಥಮ ಸ್ಥಳಾಂತರ ಇದಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಪರಿಸರ ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳ ಬುಕ್ಕಿಂಗ್ ಅನ್ನು ಆನ್ ಲೈನ್ ಮಾಡಲಾಗಿದೆ, ಅರಣ್ಯ ಅಪರಾಧಗಳನ್ನು ತಡೆಯಲು ಮತ್ತು ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡಲು ಗರುಡಾಕ್ಷಿ – ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮತ್ತಿತರರು ಉಪಸ್ಥಿತರಿದ್ದರು.