ಬೆಂಗಳೂರು: ರಾಜ್ಯದ ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವಂತ 100 ಪ್ರಥಮ ದರ್ಜೆ ಸಹಾಯಕರು, 200 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಈ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ವಿವಿಧ ಜಿಲ್ಲೆಗಳ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರವನ್ನು ಬರೆಯಲಾಗಿದೆ. ಅದರಲ್ಲಿ ರಾಜ್ಯದ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿಗಳಲ್ಲಿ ನೇರ ನೇಮಕಾತಿ ಕೋಟಾದಡಿ ಗಣನೀಯ ಮಟ್ಟದಲ್ಲಿ ಲಿಪಿಕ ವೃಂದದ ಹುದ್ದೆಗಳು ಖಾಲಿ ಇದ್ದು, ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಈ ಹಿಂದೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದಿದ್ದಾರೆ.
ಆರ್ಥಿಕ ಇಲಾಖೆಯು 100 ಪ್ರಥಮ ದರ್ಜೆ ಸಹಾಯಕರು ಹಾಗೂ 200 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸಹಮಿತಿ ನೀಡಲಾಗಿದೆ. ಈ ಹುದ್ದೆಗಳನ್ನು ಜಿಲ್ಲಾ ಪಂಚಾಯ್ತಿಯಲ್ಲಿ ನೇರ ನೇಮಕಾತಿ ಕೋಟಾದಡಿ ಮಂಜೂರಾದ, ಖಾಲಿ ಇರುವ ಹುದ್ದೆಗಳ ಆಧಾರದಲ್ಲಿ ಭರ್ತಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ಈ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ದಿನಾಂಕ 09-02-2024ರಂದು ಆಯುಕ್ತಾಲಯದಲ್ಲಿ ಆಯೋಗಿಸಲಾಗಿದ್ದ ಕಾರ್ಯಾಗಾರದಲ್ಲಿ ಎಲ್ಲಾ ಜಿಲ್ಲಾ ಪಂಚಾಯ್ತಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಲಾಗಿರುತ್ತದೆ ಎಂದಿದ್ದಾರೆ.
ಈ ಹುದ್ದೆಗಳಿಗೆ ಮೀಸಲಾತಿ ರೋಷ್ಟರ್ ಬಿಂದುಗಳನ್ನು ಗುರುತಿಸಿ, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಪ್ರಸ್ತಾವನೆಯನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಲ್ಲಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.