ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್.ಕೆ.ಜಿ.,ಯುಕೆಜಿ, ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು, ಎಲ್.ಕೆ.ಜಿ., ಯುಕೆಜಿ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಗುವುದು. ಈಗಾಗಲೇ 1-10ನೇ ತರಗತಿ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ನೀಡಲಾಗುತ್ತಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಉಚಿತ ನೋಟ್ ಪುಸ್ತಕಗಳನ್ನು ನೀಡಲು ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.
ನಿಗದಿತ ವೇಳಾಪಟ್ಟಿಯಂತೆ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫಲಿತಾಂಶ ಹೆಚ್ಚಳಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದೆ. ಸಂಪನ್ಮೂಲ ವ್ಯಕ್ತಿಗಳ ಮೂಲಕ ಮಕ್ಕಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಹೇಳಿದ್ದಾರೆ.
4 ಸಾವಿರ ಬೋಧಕರಿಗೆ ಬಡ್ತಿ ಭಾಗ್ಯ
ರಾಜ್ಯದಲ್ಲಿ 2017ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು 1-5 ನೇ ತರಗತಿಗೆ ಮಾತ್ರ ಪಾಠ ಮಾಡಬೇಕು. ಪದವೀಧರ ಶಿಕ್ಷಕರು 7ನೇ ತರಗತಿವರೆಗೆ ಪಾಠ ಮಾಡಬೇಕು ಎಂಬ ನಿಯಮ ತಂದಿದ್ದರಿಂದ ಸಮಸ್ಯೆಯಾಗಿ ಬಡ್ತಿ ವಿಚಾರಗಳಿಗೆ ತಡೆಯಾಗಿತ್ತು. ಶಿಕ್ಷಕರು ನ್ಯಾಯಾಲಯಕ್ಕೆ ಹೋಗಿದ್ದರು. 2017ರ ಹಿಂದೆ ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರು 7ನೇ ತರಗತಿಯವರೆಗೆ ಪಾಠ ಮಾಡಬಹುದು ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಸೇವಾ ಜೇಷ್ಠತೆಯ ಅನುಸಾರ ಒಂದು ಅನುಪಾತ ನಿರ್ದಿಷ್ಟಪಡಿಸಿ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಯವರೆಗೆ, ಪಿಯು ಉಪನ್ಯಾಸಕರಿಗೆ ಪ್ರಾಂಶುಪಾಲ ಹುದ್ದೆಗೆ ಬಡ್ತಿ ನೀಡಲು ತೀರ್ಮಾನಿಸಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಶಿಕ್ಷಕರಿಗೆ ಅನುಕೂಲವಾಗುವ ರೀತಿ ಬಡ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.








