ಬೆಂಗಳೂರು : ಪ್ರಾಯೋಗಿಕವಾಗಿ ಬೆಂಗಳೂರು ನಗರದ 250 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸೊರಿಗಳನ್ನು ಆರಂಭಿಸಲಾಗಿದೆ. ಹಂತ ಹಂತವಾಗಿ ರಾಜ್ಯದ 5 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ನಮ್ಮ ಇಲಾಖೆ ಸನ್ನದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸರ್ಕಾರಿ ಮಾಂಟೆಸೊರಿಗಳಲ್ಲಿ ಕನ್ನಡ, ಇಂಗ್ಲೀಷ್ ಎರಡೂ ಮಾಧ್ಯಮಗಳಲ್ಲೂ ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಮಕ್ಕಳಿಗೆ ಒಂದು ಜೊತೆ ಸಮವಸ್ತ್ರ, ಒಂದು ಬ್ಯಾಗ್ ಮತ್ತು ಪೆನ್ಸಿಲ್ ಬಾಕ್ಸ್ ನೀಡಲಾಗುವುದು. ಮಕ್ಕಳ ಮುಂದಿನ ಶೈಕ್ಷಣಿಕ ಅನುಕೂಲಕ್ಕಾಗಿ ವರ್ಗಾವಣೆ ಪತ್ರ ಕೂಡ ನೀಡಲಾಗುವುದು. ಮಾಂಟೆಸೊರಿಗಳಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಹಾಗೂ ಅಗತ್ಯ ತರಬೇತಿ ಪಡೆದಿರುವ ಅಂಗನವಾಡಿ ಕಾರ್ಯಕರ್ತೆಯರನ್ನು ಮಾತ್ರ ಬೋಧಕರಾಗಿ ಬಳಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಸಿಗಬೇಕೆಂಬ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ಎಲ್‌ಕೆಜಿ, ಯುಕೆಜಿ) ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.