ಬೆಂಗಳೂರು : ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನು ವಿಶೇಷ ಪೋಲಿಸ್ ಠಾಣೆಗಳೆಂದು ಘೋಷಿಸಲು ಹಾಗೂ ಸದರಿ ಠಾಣೆಗಳ ನಿರ್ವಹಣೆಗಾಗಿ ಅಗತ್ಯವಿರುವ 450 ವಿವಿಧ ಹುದ್ದೆಗಳಿಗೆ ಮಂಜೂರಾತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಆದೇಶದಲ್ಲಿ, ಅಸ್ಪೃಶ್ಯತಾ ನಿಷೇಧ ಕಾಯಿದೆ 1955ನ್ನು ಜಾರಿಗೊಳಿಸಲು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗದವರ ವಿರುದ್ಧ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಲು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯವನ್ನು (ಡಿ.ಸಿ.ಆರ್.ಇ) 1974 ರಲ್ಲಿ ಸ್ಥಾಪಿಸಲಾಯಿತು.
ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ದಿನಾಂಕ:27-12-1975ರ ಆದೇಶದಲಿ, 14 ಅಂಶಗಳಿಗೆ ಸಂಬಂಧಪಟ್ಟಂತೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯವು (ಡಿಸಿಆರ್‌ಇ) ಗುಪ್ತಚರ ಮಾಹಿತಿ ಸಂಗ್ರಹಿಸಿ, ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (3) ರ ಆದೇಶದಲ್ಲಿ ಡಿಸಿಆರ್‌ಇ ಘಟಕದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಮೇಲ್ಪಟ್ಟ ಅಧಿಕಾರಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಅಧಿನಿಯಮ, 1989 ರನ್ವಯ ದಾಖಲಾಗುವ ಪ್ರಕರಣಗಳನ್ನು ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುವ ಅಧಿಕಾರವನ್ನು ನೀಡಲಾಗಿರುತ್ತದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (4) ರ ಆದೇಶದಂತೆ, ಕರ್ನಾಟಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮೀಸಲಾತಿ), ನಿಯಮ-7 ರಡಿಯಲ್ಲಿ ಡಿಸಿಆರ್‌ಇ ಘಟಕವು ಸುಳ್ಳು, ಜಾತಿ ಪ್ರಮಾಣ ಪತ್ರಗಳ ಪ್ರಕರಣಗಳಲ್ಲಿ ತನಿಖೆಯನ್ನು ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗುತ್ತಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (5) ರನ್ವಯ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995 ರಂತೆ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರಕ್ಷಣಾ ಘಟಕವೆಂದು ಆದೇಶಿಸಲಾಗಿದೆ.
ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಘಟಕಗಳಿಗೆ ಪ್ರಸ್ತುತ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲದೇ ಇರುವುದರಿಂದ, ಎಫ್‌ಐಆರ್ ದಾಖಲು ಮಾಡಿ ತನಿಖೆ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ರಡಿ ಪ್ರಸ್ತುತ ಸ್ಥಳೀಯ ಪೊಲೀಸ್ ಠಾಣೆಯಿಂದಲೇ ದೌರ್ಜನ್ಯ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ದೌರ್ಜನ್ಯ ಪ್ರಕರಣಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿ ತನಿಖೆ ಮಾಡಿ ನ್ಯಾಯಾಲಯಗಳಿಗೆ ವರದಿಯನ್ನು ಸಲ್ಲಿಸಲಾಗುತ್ತಿದ್ದು ಸ್ಥಳೀಯ ಠಾಣೆಗಳಿಲ್ಲಿರುವ ಇತರೆ ಕರ್ತವ್ಯಗಳ ಒತ್ತಡಗಳಿಂದ ದೌರ್ಜನ್ಯ ಪ್ರಕರಣಗಳಲ್ಲಿ ವಿವರವಾದ ತನಿಖೆ ನಡೆಸಿ, ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ, ಮಾನ್ಯ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸುವ ಬಗ್ಗೆ ವಿಳಂಬವಾಗುತ್ತಿದೆ.
ಮುಂದುವರೆದು, ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ, 1989ರಡಿ ದಾಖಲಾದ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಇರುತ್ತದೆ. ಆದ್ದರಿಂದ ದೌರ್ಜನ್ಯ ತಡೆ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಿ, ನಿಗಧಿತ ಸಮಯದೊಳಗೆ ತನಿಖೆ ನಡೆಸಿ, ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಗಳನ್ನು ಸಲ್ಲಿಸುವ ಬಗ್ಗೆ ಪರಿಣಾಮಕಾರಿಯಗಿ ಕಾರ್ಯನಿರ್ವಹಿಸಲು ಡಿಸಿಆರ್‌ಇ ಘಟಕಗಳನ್ನು ವಿಶೇಷ ಪೊಲೀಸ್ ಠಾಣೆಗಳೆಂದು ಘೋಷಿಸುವುದು ಅವಶ್ಯಕವಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗದವರ ವಿರುದ್ಧ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ದೂರು ದಾಖಲಿಸಿ, ನಿಗಧಿತ ಅವಧಿಯಲ್ಲಿ ಸೂಕ್ತ ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಗಳಲ್ಲಿ ಸಲ್ಲಿಸಲು ಪ್ರತಿ ಜಿಲ್ಲೆಗೆ ಒಂದರಂತೆ ಹಾಗೂ ಬೆಂಗಳೂರು ನಗರಕ್ಕೆ 02 ರಂತೆ ರಾಜ್ಯದಲ್ಲಿ ಒಟ್ಟು 33 ಡಿಸಿಆರ್‌ಇ ವಿಶೇಷ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಮತ್ತು ಸದರಿ 33 ವಿಶೇಷ ಪೊಲೀಸ್ ಠಾಣೆಗಳ ನಿರ್ವಹಣೆಗಾಗಿ ಡಿಸಿಆರ್‌ಇ ಘಟಕದಲ್ಲಿ ಹಾಲಿ ಇರುವ 340 ಹುದ್ದೆಗಳ ಜೊತೆಗೆ ಹೆಚ್ಚುವರಿಯಾಗಿ ಈ ಕೆಳಕಂಡ 450 ವಿವಿಧ ವೃಂದದ ಹುದ್ದೆಗಳನ್ನು ಮಂಜೂರು ಮಾಡುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (6) ರಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಡಿಸಿಆರ್‌ಇ ಇವರು ಪ್ರಸ್ತಾವನೆ ಸಲ್ಲಿಸಿರುತ್ತಾರೆ.
ಸದರಿ ಪ್ರಸ್ತಾವನೆಯನ್ನು ದಿನಾಂಕ: 20-06-2024 ರಂದು ನಡೆದ ಸಚಿವ ಸಂಪುಟ ಸಭೆಯ ಮುಂದೆ ಸಲ್ಲಿಸಲಾಗಿರುತ್ತದೆ. ಸಚಿವ ಸಂಪುಟವು ತಾತ್ವಿಕ ಅನುಮೋದನೆ ನೀಡಿರುತ್ತದೆ. ಮುಂದುವರೆದು, ಅಧಿಸೂಚನೆ ಹೊರಡಿಸುವ ಪೂರ್ವದಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಠಾಣೆಗಳಿಗೆ ಬೇಕಾಗುವ ಮೂಲಸೌಕರ್ಯಗಳು, ಅಗತ್ಯ ಸಿಬ್ಬಂದಿ, ನೇಮಕಾತಿ ಇವುಗಳ ಅವಶ್ಯಕತೆ ಗಮನಿಸಿದ ಸಚಿವ ಸಂಪುಟವು ಇವುಗಳ ಕುರಿತು ಗೃಹ ಸಚಿವರು ಮತ್ತು ಸಮಾಜ ಕಲ್ಯಾಣ ಸಚಿವರು ಪರಸ್ಪರ ಚರ್ಚಿಸಿದ ನಂತರ ಇವುಗಳನ್ನು ಒಳಗೊಂಡು ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಸಲ್ಲಿಸುವಂತೆ ಸಚಿವ ಸಂಪುಟವು ಇಲಾಖೆಗೆ ಸೂಚಿಸಿತು.
ಸಚಿವ ಸಂಪುಟದ ನಿರ್ದೇಶನದಂತೆ, ಮಾನ್ಯ ಗೃಹ ಸಚಿವರು ಮತ್ತು ಮಾನ್ಯ ಸಮಾಜ ಕಲ್ಯಾಣ ಸಚಿವರುಗಳು ದಿನಾಂಕ: 04-07-2024 ರಂದು, ಒಳಾಡಳಿತ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಆರ್ಥಿಕ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ದೌರ್ಜನ್ಯ ತಡ ಪ್ರಕರಣಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಮತ್ತು ದೌರ್ಜನ್ಯ ಪ್ರಕರಣಗಳು ಆಗದಂತೆ ಕ್ರಮವಹಿಸಲು ಡಿಸಿಆರ್‌ಇ ಘಟಕಗಳನ್ನು ವಿಶೇಷ ಪೊಲೀಸ್ ಠಾಣೆಗಳೆಂದು ಘೋಷಿಸುವುದು ಮತ್ತು ಶಿಕ್ಷೆಯ ಪ್ರಮಾಣವನ್ನು ಇತರೆ ರಾಜ್ಯಗಳಂತೆ ಹೆಚ್ಚಿಸುವುದು ಅಗತ್ಯವಿದೆ ಎಂದು ಪರಿಗಣಿಸಿ, ಡಿಸಿಆರ್‌ಇ ಪ್ರಸ್ತಾವನೆಯನ್ನು ಮತ್ತೊಮ್ಮೆ ಸಚಿವ ಸಂಪುಟಕ್ಕೆ ಸಲ್ಲಿಸಲು ನಿರ್ಧರಿಸಲಾಯಿತು.