ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಪೌಷ್ಠಿಕತೆಯ ಕೊರತೆ ನೀಗಿಸಲು ಸರ್ಕಾರ ವಾರದಲ್ಲಿ 6 ದಿನವೂ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ನಾಳೆ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ವಾರದಲ್ಲಿ 6 ದಿನ ಉಚಿತವಾಗಿ ವಿತರಿಸುವಂತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಜೀಂ ಪ್ರೇಮ್‌ಜೀ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರದ ಅಕ್ಷರ ದಾಸೋಹ- ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು 2024-25 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ವಾರದಲ್ಲಿ 6 ದಿನಗಳಂದು ಉಚಿತವಾಗಿ ವಿತರಿಸುವ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ:20.07.2024 ರಂದು ಬೆಳಿಗ್ಗೆ 10.30 ಗಂಟೆಗೆ ಹೋಟೆಲ್ ರಾಡಿಸನ್ ಬ್ಲ್ಯೂ (ಹೋಟೆಲ್ ಏಟ್ರಿಯಾ), ಬೆಂಗಳೂರು ಇಲ್ಲಿ ನಡೆಯಲಿದೆ ಎಂದಿದ್ದಾರೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ರವರು ನೆರವೇರಿಸಲಿದ್ದಾರೆ. ಡಿ.ಕೆ.ಶಿವಕುಮಾರ್, ಉಪ ಮುಖ್ಯ ಮಂತ್ರಿಗಳು ಇವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಅಜೀಂ ಹೆಚ್ ಪ್ರೇಮ್‌ಜಿ, ಅಧ್ಯಕ್ಷರು, ಅಜೀಂ ಪ್ರೇಮ್‌ಜಿ ಫೌಂಡೇಷನ್ ಹಾಗೂ ಸಂಸ್ಥಾಪಕ ಅಧ್ಯಕ್ಷರು, ವಿಪ್ರೋ ಲಿಮಿಟೆಡ್ ಇವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಎಸ್.ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಆಡಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಿಜ್ವಾನ್ ಅರ್ಷದ್, ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರ ರವರು ವಹಿಸಲಿದ್ದಾರೆ ಅಂತ ತಿಳಿಸಿದ್ದಾರೆ.