ಬೆಂಗಳೂರು: 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್ಸುಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸಿ ಆದೇಶಿಸಲಾಗಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 28.02.2026 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ.
ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 28.02.2026 ರಿಂದ 17.03.2026 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಿದ್ದಾರೆ.
ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು. ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಿದ್ದಾರೆ.
BIG BREAKING: ಹೃದಯಾಘಾತದಿಂದ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಜೋ ಸೈಮನ್ ನಿಧನ
BREAKING : ಅಬಕಾರಿ ಬಳಿಕ ‘RTO’ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತಪಾಸಣೆ ಮಾಡದೇ ವಾಹನಗಳಿಗೆ ‘FC’ ವಿತರಣೆ!








