ಬೆಂಗಳೂರು: ಸಂಚಾರಿ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾಯ್ದೆ ಜಾರಿಗೆ ತರಲಾಗುತ್ತದೆ. 2024-25 ನೇ ಸಾಲಿನಲ್ಲಿ ಕುರಿಗಾಹಿ ಸಮುದಾಯಗಳಿಗೆ ಘೋಷಿಸಿರುವ ಕಾರ್ಯಕ್ರಮಗಳ ಜಾರಿಗೆ ಆದೇಶ ಹೊರಡಿಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲೂ ಅಗತ್ಯ ಸೂಚನೆ ನೀಡಲಾಗುವುದು ಎಂದರು.

ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಗುರುತಿನ ಚೀಟಿ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಕೇರಂ ಕೈಗೊಳ್ಳಲಾಗುವುದು ಎಂದರು.

ಬಂದೂಕು ಪರವಾನಗಿ ನೀಡಲು ವ್ಯವಸ್ಥೆ, ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ಮೇರೆಗೆ ಪ್ರವೇಶ ನೀಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು ಇವುಗಳಿಗೆ ಸರ್ಕಾರಿ ಆದೇಶ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಪಶುಸಂಗೋಪನಾ ಇಲಾಖೆಯಲ್ಲಿ 1300 ವೈದ್ಯರ ಹುದ್ದೆ ಖಾಲಿ ಇದ್ದು, ಪ್ರಸ್ತುತ 400 ವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ಮುಂದಿನ ವರ್ಷ ಬಾಕಿ ವೈದ್ಯರ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕುರಿಗಾರರು ಕ್ಯಾಂಪ್ ಮಾಡಿರುವ ಕಡೆಗಳಲ್ಲೇ ವೈದ್ಯರು ಬಂದು ಚಿಕಿತ್ಸೆ ನೀಡಬೇಕು ಎಂದು ಸೂಚಿಸಲಾಗುವುದು. ಕುರಿಗಾರರ ಕುರಿ ಕಳ್ಳತನವಾದರೆ ಕೂಡಲೇ ಪ್ರಕರಣ ದಾಖಲು ಮಾಡಬೇಕು, ಬಂಧಿಸಿ ತನಿಖೆ ಮಾಡಲು ಹಾಗು ರಕ್ಷಣೆ ನೀಡುವ ವ್ಯವಸ್ಥೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

ಹಿಂದಿನ ಸರ್ಕಾರ ಸತ್ತ ಕುರಿಗಳಿಗೆ ನೀಡುವ ಅನುಗ್ರಹ ಯೋಜನೆಯನ್ನು ನಿಲ್ಲಿಸಿದ್ದು, ಈ ಕುರಿತು ಪರಿಹಾರ ನೀಡುವ ಬಗ್ಗೆ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಲಾಗುವುದು ಎಂದರು.

ಗೋಮಾಳಗಳನ್ನು ಯಾರಿಗೂ ಪರಭಾರೆ ಮಾಡಬಾರದೆಂದು ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶ ಹೊರಡಿಸಲಾಗಿತ್ತು. ಗೋಮಾಳಗಳ ರಕ್ಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.

ಪಶುಸಂಗೋಪನಾ ಸಚಿವ ವೆಂಕಟೇಶ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ವರ್ತೂರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಉಪಸ್ಥಿತರಿದ್ದರು.

BIG NEWS: ರಾಜ್ಯದಲ್ಲಿ ನಿನ್ನೆಯವರೆಗೆ 5,374 ಡೆಂಗ್ಯೂ ಕೇಸ್ ದಾಖಲು, ಐವರು ಸಾವು: ಸಿಎಂ ಸಿದ್ಧರಾಮಯ್ಯ

BIG NEWS: ರಾಜ್ಯದಲ್ಲಿ ನಿನ್ನೆಯವರೆಗೆ 5,374 ಡೆಂಗ್ಯೂ ಕೇಸ್ ದಾಖಲು, ಐವರು ಸಾವು: ಸಿಎಂ ಸಿದ್ಧರಾಮಯ್ಯ

Share.
Exit mobile version