ಬೆಂಗಳೂರು : ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಣ ಇಲಾಖೆಯಿಂದಲೇ ಮಕ್ಕಳಿಗೆ ಉಚಿತ ನೀಟ್, ಸಿಇಟಿ ತರಬೇತಿ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ನೀಟ್, ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದಗೊಳಿಸಲು ಪ್ರಸಕ್ತ ವರ್ಷದಲ್ಲಿ 25000 ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಉಚಿತ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುವುದಕ್ಕೆ ಲಕ್ಷಾಂತರ ರು. ಶುಲ್ಕ ಪಾವತಿಸುವುದನ್ನು ತಡೆಯುವ ಸಲುವಾಗಿ ಮುಂದಿನ ವರ್ಷದಿಂದ 25 ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದಲೇ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಗೂ ಇಲಾಖೆಯಿಂದ ನೀಡಲಾಗುವ ಪ್ರತ್ಯೇಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ 25 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿಗೆ ಆಯ್ಕೆ ಮಾಡಲಾಗುವುದು. ತರಬೇತಿಯ ಕ್ಲಾಸ್ ಆನ್ಲೈನ್ ಮೂಲಕ ನಡೆಯಲಿದ್ದು, ಅವರೊಂದಿಗೆ ಇತರ ವಿದ್ಯಾ ರ್ಥಿಗಳೂ ಅದರ ಲಾಭ ಪಡೆಯಬಹುದು. ಅಲ್ಲದೆ, ಈ ಯೋಜನೆಗಾಗಿ ಇಲಾಖೆ 12.50 ಕೋಟಿ ರು. ವ್ಯಯಿಸಲಿದೆ ತಿಳಿಸಿದರು.