ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ದೀರ್ಘಕಾಲದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಗುವ ಲಕ್ಷಣಗಳು ಕಾಣುತ್ತಿವೆ. ಸಾರಿಗೆ ನೌಕರರ ವೇತನವನ್ನು ಶೇ. 10ರಿಂದ 12.5ರಷ್ಟು ಹೆಚ್ಚಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ವೇತನ ಹೆಚ್ಚಳವು 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರವು ಇಂದು (ಮಂಗಳವಾರ) ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಯಿದೆ.ಸಾರಿಗೆ ನಿಗಮಗಳು ಈ ಮೊದಲು ಕೇವಲ ಶೇ. 7ರಷ್ಟು ವೇತನ ಹೆಚ್ಚಳದ ಪ್ರಸ್ತಾಪ ಮುಂದಿಟ್ಟಿದ್ದವು. ಆದರೆ ನೌಕರರ ಸಂಘಟನೆಗಳು ಶೇ. 25ರಷ್ಟು ಹೆಚ್ಚಳಕ್ಕೆ ಪಟ್ಟು ಹಿಡಿದು, ಮಾರ್ಚ್ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದವು.
ಈ ಬಿಕ್ಕಟ್ಟನ್ನು ಬಗೆಹರಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಸಭೆ ನಡೆಸಿ ಚರ್ಚಿಸಿದ್ದಾರೆ. ಈ ಸಭೆಯ ಬಳಿಕ ಶೇ. 10ರಿಂದ 12.5ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ನಿರ್ಧಾರದಿಂದಾಗಿ ಸಾರಿಗೆ ನೌಕರರು ಹಮ್ಮಿಕೊಂಡಿದ್ದ ಮುಷ್ಕರ ಕೈಬಿಡುವ ಸಾಧ್ಯತೆಯಿದ್ದು, ಲಕ್ಷಾಂತರ ನೌಕರರಿಗೆ ಆರ್ಥಿಕ ಅನುಕೂಲವಾಗಲಿದೆ.








