ತುಮಕೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಎಲ್ ಕೆಜಿಯಿಂದ ಪಿಯುಸಿ ವರೆಗೆ ಒಂದೇ ಕ್ಯಾಂಪಸ್ ನಲ್ಲಿ ಶಿಕ್ಷಣ ನೀಡಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3,000 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಪ್ರಸಕ್ತ ವರ್ಷದಲ್ಲೇ 500 ಶಾಲೆಗಳನ್ನು ಆರಂಭಿಸಲಾಗುವುದು, ಎಲ್ ಕೆಜಿಯಿಂದ ಹಿಡಿದು ಪಿಯುಸಿವರೆಗೂ ಒಂದೇ ಕ್ಯಾಂಪಸ್ ನಲ್ಲಿ ಶಿಕ್ಷಣ ನೀಡುವ ಉದ್ದೇಶವಿದೆ ಎಂದು ಹೇಳಿದ್ದಾರೆ.
ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಸೆಪ್ಟೆಂಬರ್ ನಿಂದ ಪ್ರತಿನಿತ್ಯವೂ ಮೊಟ್ಟೆ ನೀಡಲಾಗುತ್ತದೆ. . ಸದ್ಯ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಲಾಗುತ್ತಿದ್ದು, ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಕಾರದೊಂದಿಗೆ ಪ್ರತಿದಿನ ಮೊಟ್ಟೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ.