ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರ ಜೊತೆಗೆ ಇನ್ನೂ ಒಂಬತ್ತು ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ. ನಾಗಮೋಹನದಾಸ್ ಸಮಿತಿ ವರದಿ ಬಂದ ಬಳಿಕ ಈ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.