ಕಲಬುರಗಿ : ಕಲ್ಯಾಣ ಕರ್ನಾಟಕದ ಜನತೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಸಿಹಿಸುದ್ದಿ  ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗದವರಿಂದಲೆ 50 ಸಾವಿರ ಹುದ್ದೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಬುಧವಾರ ನಡೆದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿಯೇ 371ಜೆ ಮೀಸಲಾತಿಯನ್ವಯ ಕಲ್ಯಾಣ ಕರ್ನಾಟಕ ಭಾಗದವರಿಂದಲೆ 50 ಸಾವಿರ ಹುದ್ದೆ ಭರ್ತಿ ಮಾಡಲಾಗುವುದು. ಈಗಾಗಲೆ ವಿವಿಧ ಇಲಾಖೆಯಲ್ಲಿ 15 ಸಾವಿರ ನೇಮಕಾತಿ ಪ್ರಕ್ರಿಯೆ ನಡೆದಿದೆ. ಮುಂದಿನ 2-3 ವರ್ಷಗಳಲ್ಲಿ ಎಲ್ಲಾ ಹುದ್ದೆ ಭರ್ತಿ ಮಾಡುವ ಮೂಲಕ ಸ್ಥಳೀಯರಿಗೆ ಉದ್ಯೋಗ ನೀಡಲಾಗುವುದು ಎಂದರು.

ಕಳೆದ 2022ರ ಡಿಸೆಂಬರ್‍ನಲ್ಲಿ ಇದೇ ಸ್ಥಳದಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ 5,000 ಕೋಟಿ ರೂ. ಅನುದಾನ ನಿಡುವುದಾಗಿ ಘೋಷಿಸಿದ್ದರು, ಅದರಂತೆ ನಮ್ಮ ಸರ್ಕಾರ  5 ಸಾವಿರ ಕೋಟಿ ಹಣ ನೀಡಿದೆ. ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ, ಕಿದ್ವಾಯಿ ಆಸ್ಪತ್ರೆ, ತಾಯಿ-ಮಕ್ಕಳ ಆಸ್ಪತ್ರೆ, ಜಿಮ್ಸ್ ಆಸ್ಪತ್ರೆ, ಟ್ರಾಮಾ ಸೆಂಟರ್ ಆರಂಭಿಸಿದ್ದೇವೆ. ಸುಟ್ಟು ಗಾಯಗಳ ಘಟಕ, ಕ್ರಿಟಿಕಲ್ ಕೇರ್ ಯುನಿಟ್, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಶಾಖೆ ಸಹ ಮಂಜೂರು ಮಾಡಿದ್ದು, ಒಟ್ಟಾರೆಯಾಗಿ ಕಲಬುರಗಿಯನ್ನು ಮೆಡಿಕಲ್ ಹಬ್ ಆಗಿ ಪರಿವರ್ತಿಸುವ ಸಂಕಲ್ಪ ಹೊಂದಿದ್ದೇವೆ ಎಂದರು.

ನುಡಿದಂತೆ ನಡೆಯುವ ಸರ್ಕಾರ ನಮ್ಮದಾಗಿದ್ದು, ಐದು ಗ್ಯಾರಂಟಿ ಯೋಜನೆಗಳ  ಸೌಲಭ್ಯ ಪಡೆದ ಜನರ ಅಭಿಪ್ರಾಯ ಆಲಿಸಲೆಂದು ಇಂದಿಲ್ಲಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗಿದೆ. ಬಡವರಿಗೆ ಹಣ ನೀಡಿದಕ್ಕೆ ವಿರೋಧ ಪಕ್ಷಗಳಿಗೆ ಹೊಟ್ಟೆ ಕಿಚ್ಚು. ಇದಕ್ಕಾಗಿ ಗ್ಯಾರಂಟಿ ಯೋಜನೆಗಳ ಕುರಿತು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಹೇಳಿದರು.

Share.
Exit mobile version