ಶಿವಮೊಗ್ಗ: ರಾಜ್ಯ ಸರ್ಕಾರವು ಸಾಗರ ತಾಲ್ಲೂಕಿನ ಸಿರಿವಂತೆ, ತ್ಯಾಗರ್ತಿ, ಬ್ಯಾಕೋಡಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲು ಅನುಮತಿಸಿದೆ. ಇದರಿಂದಾಗಿ ಎಲ್ ಕೆ ಜಿಯಿಂದ ದ್ವಿತೀಯ ಪಿಯುಸಿ ವರೆಗೆ ಒಂದೇ ಸೂರಿನಡಿ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡುವಂತ ವ್ಯವಸ್ಥೆಯನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಾಡಿದ್ದಾರೆ. ಈ ಮೂಲಕ ಸಾಗರ ತಾಲ್ಲೂಕಿನ ಜನತೆಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರಕ್ಕೂ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದ್ದರು. ಈ ಮನವಿಗೆ ಪುರಸ್ಕರಿಸಿರುವಂತ ಅವರು ಸಾಗರದ ಸಿರಿವಂತೆ, ತ್ಯಾಗರ್ತಿ, ಬ್ಯಾಕೋಡು ಶಾಲೆ ವ್ಯಾಪ್ತಿಯ ಐದು ಕಿಲೋಮೀಟರ್ ನ ಎಲ್ಲಾ LKGಯಿಂದ ದ್ವಿತೀಯ ಪಿಯುಸಿವರೆಗಿನ ಶಾಲೆಗಳನ್ನು ಸೇರಿಸಿ ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಲು ಅನುಮೋದನೆ ನೀಡಲಾಗಿದೆ. ಹೀಗಾಗಿ ಎಲ್ ಕೆ ಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೆಡೆಯೇ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತೆ ಆಗಲಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕರ್ನಾಟಕದಲ್ಲಿ ಸುಮಾರು 47,493 ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢ ಶಾಲೆಗಳು ಮತ್ತು 1,319 ಪದವಿ ಪೂರ್ವ ಶಾಲೆಗಳಿರುತ್ತವೆ ಎಂದು ತಿಳಿಸಿದೆ.
ಕರ್ನಾಟಕ ಪಬ್ಲಿಕ್ ಶಾಲೆಗಳು ಗುಣಮಟ್ಟದ ಸಾರ್ವಜನಿಕ ಶಿಕ್ಷಣಕ್ಕಾಗಿ ಒಂದು ಅಭೂತಪೂರ್ವ ಬದಲಾವಣೆಯ ಚೌಕಟ್ಟನ್ನು ಒದಗಿಸುತ್ತವೆ. ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆ ಮತ್ತು ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಆರಂಭಿಸಿದ ಒಂದು ಸುಧಾರಣಾತ್ಮಕ ಕಾರ್ಯತಂತ್ರವೇ ಕೆಪಿಎಸ್ ಆಗಿದೆ ಎಂದು ಹೇಳಿದ್ದಾರೆ.
ಕೆಪಿಎಸ್ ಮಾದರಿಯ ಶಾಲೆಗಳು ಒಂದೇ ಸೂರಿನಡಿಯಲ್ಲಿ ಶಾಲಾ ಪೂರ್ವ ತರಗತಿಗಳಿಂದ ಅಂದರೇ LKGಯಿಂದ 12ನೇ ತರಗತಿಯವರೆಗೆ ಅಂದರೆ ದ್ವಿತೀಯ ಪಿಯುಸಿವರೆಗೆ ಶಿಕ್ಷಣವನ್ನು ಒದಗಿಸುತ್ತದೆ. ಇದು ಕಲಿಕೆಯ ಗುಣಮಟ್ಟವನ್ನು ಉತ್ತಮಪಡಿಸಲು ಉತ್ತೇಜಿಸುತ್ತದೆ. ಅಲ್ಲದೇ ಪ್ರಾಥಮಿಕ, ಮಾಧ್ಯಮಿಕ ಮತ್ತು ಪಿಯುಸಿ ಹಂತಗಳಲ್ಲಿ ದಾಖಲಾತಿ ಹಂತದಲ್ಲಿ ಸೋರುವಿಕೆ, ಶಾಲೆ ಬಿಡುವಿಕೆಯ ದರವನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಸಿರಿವಂತೆ, ಬ್ಯಾಕೋಡು, ತ್ಯಾಗರ್ತಿಯ ಸುತ್ತಮುತ್ತಲ 5 ಕಿಲೋಮೀಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳನ್ನು ಒಳಗೊಂಡು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಉನ್ನತೀಕರಿಸಲು ಸರ್ಕಾರದ ಅಧಿಕೃತ ಆದೇಶ ಮಾಡಿದೆ. ಅಲ್ಲದೇ ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನವನ್ನು ಬಿಡುಗಡೆ ಮಾಡಿದೆ.
ಸಾಗರ ತಾಲ್ಲೂಕಿನ ಸಿರಿವಂತೆ, ಬ್ಯಾಕೋಡು, ತ್ಯಾಗರ್ತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆಗೆ ಸರ್ಕಾರದ ಅನುಮೋದಿಸಿರುವುದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಸಿರಿವಂತೆ, ತ್ಯಾಗರ್ತಿ, ಬ್ಯಾಕೋಡಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭವಾಗುತ್ತಿರುವುದಕ್ಕೆ ಸಂತಸವನ್ನು ಶಾಲಾ ಮಕ್ಕಳ ಪೋಷಕರು ವ್ಯಕ್ತಪಡಿಸಿದ್ದಾರೆ.
ಇನ್ನೂ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸನಗರ ತಾಲ್ಲೂಕಿನಲ್ಲೂ ಒಂದು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಲು ಸರ್ಕಾರ ಆದೇಶಿಸಿದೆ. ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಲು ಅನುಮತಿಸಿ ಆದೇಶಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು