ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯು ಏ.01 ರಿಂದ 370/- ರೂ. ಗೆ ಹೆಚ್ಚಳವಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೂಲಿ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವ 349/-ರೂ. ಗಳಿಂದ 370/- ರೂ. ಗಳಿಗೆ ಪರಿಷ್ಕರಿಸಿ ಏ.01 ರಿಂದ ಆರ್ಥಿಕ ವರ್ಷ 2025-26 ನೇ ಸಾಲಿಗೆ ಅನ್ವಯವಾಗುವಂತೆ ಪಾವತಿಸಲು ಕ್ರಮವಹಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.
ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6 ರಲ್ಲಿ ಅರ್ಜಿಯನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ, ಕೂಲಿ ಕೆಲಸವನ್ನು ತಮ್ಮ ಗ್ರಾಮದಲ್ಲೇ ಪ್ರತಿ ಕುಟುಂಬವು 100 ದಿನಗಳವರೆಗೆ ನರೇಗಾ ಕೆಲಸದಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.
ವಿಶೇಷ ಚೇತನರು ಹಾಗೂ ಮಹಿಳೆಯರಿಗೆ ಸಿಗುವ ಸೌಲಭ್ಯಗಳು:
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯತಿ ಇರುತ್ತದೆ.
ಶೇ.60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯತಿ ನೀಡಲಾಗುತ್ತದೆ.
ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ 06 ತಿಂಗಳ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿAದ 06 ತಿಂಗಳವರೆಗೆ ಯೋಜನೆಯಡಿ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದೆ. ರಿಯಾಯತಿ ಪಡೆಯಲು ಆರೋಗ್ಯ ಇಲಾಖೆಯು ನೀಡುವ ತಾಯಿ ಕಾರ್ಡ್ ನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ.
ನಮೂನೆ-1 ರಲ್ಲಿ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವುದು. ಅರ್ಜಿ ಜೊತೆಗೆ ಪಾಸ್ ಪೋಟ್ ಅಳತೆಯ ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಆಯಾ ಗ್ರಾಮ ಪಂಚಾಯತಿಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು ಎಂದು ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.