ಬೆಂಗಳೂರು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕೊನೆಗೂ ಶಿಕ್ಷಣ ಇಲಾಖೆಯು ಸಿಹಿ ಸುದ್ದಿ ಸಿಕ್ಕಿದೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಗೆ ಸಂಬಂಧಿಸಿದಂತೆ ಇದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿದ್ದು, ಹಿಂದಿನ ನಿಯಮಗಳ ಪ್ರಕಾರ ನೇಮಕಾತಿ ಪ್ರಕ್ರಿಯೆ ಮುಂದುವರಿಸುವಂತೆ ಸೂಚನೆ ನೀಡಿದೆ.
ವಿವಾಹಿತ ಮಹಿಳೆಯರು ತಂದೆಯ ಆದಾಯ ಪ್ರಮಾಣಪತ್ರ ನೀಡಿ ನೇಮಕವಾಗಿರುವುದನ್ನು ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹಿಂದಿನ ನಿಯಮಗಳಂತೆ ಪ್ರಕ್ರಿಯೆ ಮುಂದುವರಿಸುವಂತೆ ತಿಳಿಸಿ ವಿಚಾರಣೆಯನ್ನು ಮುಂದೂಡಿದೆ. ಸುಪ್ರೀಂ ತೀರ್ಪಿನಿಂದಾಗಿ ಸಿಂಧುತ್ವ ಪ್ರಮಾಣಪತ್ರ ಸಲ್ಲಿಸದ ಕಾರಣ ಇಲ್ಲಿಯವರೆಗೂ ಕರ್ತವ್ಯಕ್ಕೆ ಹಾಜರಾಗದ ಶಿಕ್ಷಕರು ಆದೇಶ ಪ್ರತಿ ಪಡೆದು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಅನುಕೂಲವಾಗಲಿದೆ ಎನ್ನಲಾಗಿದೆ.