ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇದ್ದಂತ ಶಿಕ್ಷಕರ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಈಗ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2015 ರಿಂದ 2020ರವರೆಗೆ ನಿವೃತ್ತಿಯಿಂದ ತೆರವಾಗಿರುವಂತ ಹುದ್ದೆ ತುಂಬಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಡಳಿತ ಮಂಡಳಿಗಳಿಗೆ ಅನುಮತಿಸಿದೆ.
ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಪತ್ರ ದಿನಾಂಕ:02.01.2025 ರ ಪುತಿಯನ್ನು ಇದರೊಂದಿಗೆ ಲಗತ್ತಿಸಿದೆ. ಸಿ.ಆ.ಸು.ಇ 388 ಸನನಿ 2024, ದಿನಾಂಕ:25-11-2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ ಎಂದಿದ್ದಾರೆ.
ಇನ್ನೂ ಆಯ್ಕೆ ಪ್ರಾಧಿಕಾರಗಳು/ನೇಮಕಾತಿ ಪ್ರಾಧಿಕಾರಗಳು ಪರಿಶಿಷ್ಟ ಜಾತಿಯ ಒಳ ಮೀಸಲಾತಿ / ಉಪ ವರ್ಗೀಕರಣ ಪುಕ್ರಿಯೆ ಜಾರಿಯಾದ ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಕೂಲವಾಗುವಂತೆ ಉಲ್ಲೇಖಿತ ಪತ್ರದಲ್ಲಿ ಕೋರಿರುವಂತೆ ಪೂರ್ವಸಿದ್ಧತಾ ಕಾರ್ಯಗಳನ್ನು ಕೈಗೊಳ್ಳಬಹುದು ಆದರೆ, ಒಳ ಮೀಸಲಾತಿ ಬಗ್ಗೆ ಸರ್ಕಾರದ ಆದೇಶವಾಗುವವರೆಗೆ ರಿಕ್ತ ಸ್ಥಾನಗಳನ್ನು ತುಂಬುವ ಬಗ್ಗೆ ಯಾವುದೇ ಅಧಿಸೂಚನೆಯನ್ನು ಹೊರಡಿಸಬಾರದು ಮತ್ತು ನೇಮಕಾತಿಯನ್ನು ಕೈಗೊಳ್ಳತಕ್ಕದ್ದಲ್ಲ ಎಂದು ಸೂಚಿಸಿದ್ದಾರೆ.