ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆ ಅಡಿ ಪ್ರಯಾಣಿಸುವ ಪ್ರಯಾಣಿಕರಿಗೆ ಸಾರಿಗೆ ಇಲಾಖೆಯಿಂದ ಉಚಿತವಾಗಿ ಸ್ಮಾರ್ಟ್‌ಕಾರ್ಡ್ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಕ್ತಿ ಯೋಜನೆ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾ ಗಿದ್ದು, ಶೀಘ್ರದಲ್ಲಿ ಸ್ಮಾರ್ಟ್ ಕಾರ್ಡ್ ಪೂರೈಸಲು ಟೆಂಡರ್ ಪ್ರಕ್ರಿಯೆ ನಡೆಸಲಾಗುವುದು. ಫಲಾನುಭವಿಗಳಿಂದ ಯಾವುದೇ ಶುಲ್ಕ ಪಡೆಯದೇ ಉಚಿತ ವಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲು ನಿರ್ಧರಿಸಲಾಗಿದೆ. ಸ್ಮಾರ್ಟ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಯಾವ ರೀತಿ ಇರಬೇಕುಎಂಬುದನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು.
ಸ್ಮಾರ್ಟ್‌ಕಾರ್ಡ್ ವಿತರಣೆಯನ್ನು ಬಸ್ ನಿಲ್ದಾಣ, ಕರ್ನಾಟಕ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಆರಂಭಿಸಲಾಗುವುದು. ನಾಲ್ಕೂ ನಿಗಮಗಳ ಬಸ್‌ಗಳಲ್ಲೂ ಬಳಸುವಂತೆ ಸ್ಮಾರ್ಟ್ ಕಾರ್ಡ್ ಇರಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ ಹೊರ ರಾಜ್ಯದವರು ಆಧಾರ್ ಕಾರ್ಡ್ ತೋರಿಸಿ ಈ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡಿದ್ದು ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಶಕ್ತಿ ಯೋಜನೆ ದುರ್ಬಕೆ ತಡೆಗೆ ಮಹತ್ವದ ಕ್ರಮ ವಹಿಸಿದೆ. ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ.








