ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಅರ್ಜಿ ಸಲ್ಲಿಸಿದ 15 ದಿನಗಳಲ್ಲೇ ಇ-ಖಾತೆ ಪಡೆಯಬಹುದು.
ಸಿಎಂ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗ್ರಾಮೀಣ ಆಸ್ತಿಗಳಿಗೆ ಇ-ಖಾತಾ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದು, ಅರ್ಜಿದಾರರು ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ಇ-ಖಾತೆ ಪಡೆಯಬಹುದಾಗಿದ್ದು, ನಿಗದಿತ ಅವಧಿಯಲ್ಲಿ ಅಧಿಕಾರಿಗಳಿಂದ ಅನುಮೋದನೆ ದೊರಕದೆ ಇದ್ದರೆ ಸ್ವಯಂಚಾಲಿತವಾಗಿ ಅನುಮೋದನೆಯಾಗಲಿದೆ. ಸ್ಥಳೀಯ ಯೋಜನಾ ಅಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ಪಡೆಯದೆ ನಿರ್ಮಾಣವಾಗಿದ್ದ ಬಡಾವಣೆಗಳಲ್ಲಿನ ನಿವೇಶನಗಳಿಗೆ 11ಬಿ ಖಾತೆ ಕೂಡ ನೀಡಲು ಅವಕಾಶ ಕಲ್ಪಿಸಲಾಗಿದೆ.
ತೆರಿಗೆ ವ್ಯಾಪ್ತಿಗೆ ಒಳಪಡದ ಕೃಷಿಯೇತರ ಆಸ್ತಿಗಳಿಗೆ ಇ-ಖಾತೆ ನೀಡಲು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತಿ ರಾಜ್ ಅಧಿನಿಯಮ 1993 ಪ್ರಕರಣ 199ಕ್ಕೆ ತಿದ್ದುಪಡಿ ತರುವ ಮೂಲಕ, ಕರ್ನಾಟಕ ಗ್ರಾಮ ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು 2025 ಅನ್ನು ರೂಪಿಸಲಾಗಿದೆ. ಅದರ ಅನ್ವಯ, ಗ್ರಾಮೀಣ ಜನರು ಇ-ಸ್ವತ್ತು ಪೋರ್ಟಲ್ ಮೂಲಕ ಮನೆಯಲ್ಲಿಯೇ ಕುಳಿತು ತಮ್ಮ ಆಸ್ತಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ಹಾಗೂ ಇ-ಖಾತೆಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡಲಾಗಿದೆ. ಇದರಿಂದ ಆಸ್ತಿ ತೆರಿಗೆ ಲೆಕ್ಕಾಚಾರ ಸರಳಗೊಳ್ಳಲಿದ್ದು, ಪಾರದರ್ಶಕತೆ ಹೆಚ್ಚಲಿದೆ.
ಇ ಸ್ವತ್ತು ಪಡೆಯಲು ಎದುರಾಗುವ ಆಡಳಿತಾತ್ಮಕ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿ ಸ್ಥಾಪಿಸಲಾಗಿದ್ದು, ಜನರು 94834 76000 ಸಂಖ್ಯೆಗೆ ಕರೆ ಮಾಡಿ ಗೊಂದಲಗಳನ್ನು ನಿವಾರಿಸಿಕೊಳ್ಳಬಹುದಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳನ್ನು ವ್ಯವಸ್ಥಿತವಾಗಿ ದಾಖಲಿಸುವ ಹಾಗೂ ತೆರಿಗೆ ವ್ಯವಸ್ಥೆಯನ್ನು ಸುಧಾರಿಸುವ ಈ ಯೋಜನೆಯು ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ.








