ದಾವಣಗೆರೆ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 16 ಸಾವಿರ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರು, ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5 ಸಾವಿರ ಶಿಕ್ಷಕರನ್ನು ತೆಗೆದುಕೊಳ್ಳಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಸದ್ಯದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.
ಚುನಾವಣೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್ ಜಾರಿಗೊಳಿಸುವ ಭರವಸೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಓಪಿಎಸ್‌ನ್ನು ಮುಂದಿನ ಕೆಲವೇ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.