ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಉದ್ದೇಶಿಸಿದೆ. ಹಾಗಾಗಿ ಕಾಲೇಜುಗಳನ್ನು ಆರಂಭ ಮಾಡಲು ಸಿದ್ಧತೆ ಮಾಡಿಕೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ಹೌದು ಬಾಗಲಕೋಟೆ, ತುಮಕೂರು, ಕೋಲಾರ, ದಾವಣಗೆರೆ ಮತ್ತು ಬಿಜಾಪುರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ.ಎಲ್ಲಾ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭ ಮಾಡಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಇಲಾಖೆ ಮೂಲಗಳು ತಿಳಿಸಿವೆ.
ವೈದ್ಯಕೀಯ ಕಾಲೇಜು ಪ್ರಾರಂಭ ಮಾಡಲು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಸಂಬಂದಿಸಿದ ಜಿಲ್ಲೆಯಲ್ಲಿ ಸ್ಥಳ ಆಯ್ಕೆಯಿಂದ ಹಿಡಿದು ಅನೇಕ ಕೆಲಸಗಳನ್ನು ಮಾಡಿಕೊಳ್ಳುವಂತೆ ಮೌಖಿಕವಾಗಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿರುವ ಸದ್ಯ 22 ವೈದ್ಯ ಕಾಲೇಜುಗಳಿದ್ದು, ಕನಕಪುರ ಮತ್ತು ರಾಮನಗರ ವೈದ್ಯ ಕಾಲೇಜು ಈ ವರ್ಷ ಪ್ರಾರಂಭವಾಗುವ ನಿರೀಕ್ಷೆ ಇದೆ.