ಬೆಳಗಾವಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬೈಲಹೊಂಗಲ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ನೂತನ ಕೊಠಡಿಗಳ ಉದ್ಘಾಟನೆ ಮತ್ತು 2025-26ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು,ಒಳಮೀಸಲಾತಿ ಸಮೀಕ್ಷೆ ವರದಿ ಬಂದ ತಕ್ಷಣ ಶಾಲೆಗಳಿಗೆ ಮತ್ತು ಅನುದಾನಿತ ಶಾಲೆಗಳಿಗೆ, ಕಾಲೇಜುಗಳಿಗೆ ಒಟ್ಟು 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನೀಟ್, ಸಿಇಟಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಡ ವಿದ್ಯಾರ್ಥಿಗಳನ್ನು ತಯಾರು ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 25 ಸಾವಿರ ಮಕ್ಕಳಿಗೆ ಉಚಿತ ಕೋಚಿಂಗ್ ನೀಡುತ್ತಿದೆ. ಇದು ದೇಶದಲ್ಲಿಯೇ ಇತಿಹಾಸವಾಗಿದೆ. ಮುಂಬರುವ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಕ್ರಮ ಕೈಕೊಳ್ಳಲಾಗುವದು ಎಂದರು.
ಮಕ್ಕಳ ಕಲಿಕೆಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಬಡ ಮಕ್ಕಳ ಏಳ್ಗೆಗೆ ರಾಜ್ಯ ಸರಕಾರ ಹಗಲಿರುಳು ಶ್ರಮಪಡುತ್ತಿದೆ. ನನ್ನ ಮೇಲೆ ವಿಶ್ವಾಸ ಇಟ್ಟು ಸಿಎಂ, ಡಿಸಿಎಂ ಅವರು ನನಗೆ ಮಹತ್ವದ ಇಲಾಖೆ ಕೊಟ್ಟಿದ್ದಾರೆ. ಶಿಸ್ತುಬದ್ಧವಾಗಿ ಕೆಲಸ ಮಾಡುತ್ತಿದ್ದೇನೆ. ಧಾರ್ಮಿಕ ಕಾರ್ಯಕ್ರಮಗಳಿಗೆ, ದೇವಸ್ಥಾನಗಳ ಅಭಿವೃದ್ಧಿಗೆ ನಾನು ದೇಣಿಗೆ, ಅನುದಾನ ಕೊಡುವುದು ಕಡಿಮೆ. ಶಿಕ್ಷಣಕ್ಕೆ ಶಾಲಾ-ಕಾಲೇಜುಗಳಿಗೆ, ವಿದ್ಯಾರ್ಥಿಗಳಿಗೆ ಹೆಚ್ಚು ಅನುದಾನ ಕೊಡುತ್ತೇನೆ. 46 ಸಾವಿರ ಶಾಲೆಗಳ ಪೈಕಿ, 57 ಲಕ್ಷ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.