ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಹಿಂದೆ ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಈಗ ಸರ್ಕಾರವು ಒಳಮೀಸಲಾತಿ ಹಂಚಿಕೆಯನ್ನು ಯಶಸ್ವಿಯಾಗಿ ಪೂರೈಸಿದ್ದು, ನೇಮಕಾತಿಗೆ ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗಿವೆ ಎಂದು ಹೇಳಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಪ್ರಮುಖವಾಗಿ, ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ 5,800 ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು.
ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಚಿವರು, ಇಂತಹ ಸಿಬ್ಬಂದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.








