ಬೆಂಗಲೂರು : ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕ ಸೇರಿದಂತೆ ಒಟ್ಟು 10,000 ಕ್ಕೂ ಹೆಚ್ಚು ಶಿಕ್ಷಕರ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಇಲಾಖೆಯಲ್ಲಿರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಇನ್ನೂ 5 ಸಾವಿರ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್, ಮತ್ತೆ 550 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ರು ಹೆಚ್ಚಳ, ಬಿಸಿಯೂಟ ನೌಕರರ ಗೌರವಧನ 1000 ರು. ಏರಿಕೆ, 10,267 ಶಾಲಾ ಶಿಕ್ಷಕರ ನೇಮಕ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆಗೆ ಅಗಸ್ತ್ರ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಖಚಿತ ಪಡಿಸಲು ‘ನಿರಂತರ’ ಕಾರ್ಯಕ್ರಮದಡಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಪ್ರೌಢಶಾಲಾ, ಪಿಯು ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಗೆ ‘ಸ್ಕಿಲ್ ಆಟ್ ಸ್ಕೂಲ್’ ಕಾರ್ಯಕ್ರಮ ರೂಪಿಸಲಾಗಿದೆ. ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.