ಮಡಿಕೇರಿ: ರಾಜ್ಯದಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಲಾಗಿದೆ. 18,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಮೂಲಕ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಹೀಗಾಗಿಯೇ 18,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದರು.
ರಾಜ್ಯದಲ್ಲಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಕ್ರಮವಹಿಸಿದೆ. ರಾಜ್ಯದಲ್ಲಿ ಎಲ್ ಕೆಜಿಯಿಂದ ಪಿಯುಸಿಯವರೆಗೆ 1.16 ಕೋಟಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ಒದಗಿಸಿರುವುದಾಗಿ ತಿಳಿಸಿದರು.








