ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಆರ್ಥಿಕ ಇಲಾಖೆಯಿಂದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 24,300 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಈ ಕುರಿತಂತೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕೇಳಿದಂತ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ಅದರಲ್ಲಿ ಆರ್ಥಿಕ ಇಲಾಖೆಯು ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ತಮ್ಮ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದಿಸಿದೆ ಎಂದಿದ್ದಾರೆ.
ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿರುತ್ತದೆ. ರಾಜ್ಯದಲ್ಲಿ ಅನೇಕ ವರ್ಷಗಳಿಂದ ನೇಮಕಾತಿಯಾಗದೇ ನಿರುದ್ಯೋಗಿ ಆಗಿರುವ ಬಿಪಿಎಡ್ ಪದವೀಧರರಿಗೂ ಬಿಎಡ್ ಪದವೀಧರರಂತೆ ವಾರ್ಡನ್ ಅಥವಾ ಪರ್ಯಾಯ ಹುದ್ದೆಗೆ ನೇಮಕಾತಿ ಮಾಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.










