ಬೆಂಗಳೂರು : ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್ಸಿನ ಐದು ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಎಂದು ವಿಪಕ್ಷ ನಾಯಕರು ಆರೋಪಿಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದು,ಮತಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಹಾಗಾಗಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್ ಪರಿಶೀಲನೆಯೂ ಆಗಲ್ಲ.ಮತಕ್ಕಾಗಿ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಬಡವರಿಗಾಗಿ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.
ಇನ್ನು ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ದಾಟದ ಕುರಿತಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಬಾರಿ ನಮಗೆ ರಾಜ್ಯದಲ್ಲಿ ಕೇವಲ ಒಂದು ಸ್ಥಾನ ಬಂದಿತ್ತು. ಆದರೆ ಇದೀಗ ಒಂದರಿಂದ 9ಕ್ಕೆ ಏರಿದೆ. ಮೈಸೂರಲ್ಲಿ ನಮಗೆ ಸೋಲು ಆಗಿರಬಹುದು ಆದರೆ ಚಾಮರಾಜನಗರವನ್ನು ಗೆದ್ದಿದ್ದೇವೆ.ಮತಗಳಿಕೆ ವಿಚಾರದಲ್ಲಿ ಶೇಕಡಾ13ರಷ್ಟು ಹೆಚ್ಚಾಗಿದೆ. ಪಕ್ಷದ ಹೈಕಮಾಂಡ್ಗೆ ಸೋಲಿನ ಬಗ್ಗೆ ಕಾರಣ ಹೇಳುತ್ತೇನೆ.