ಮಂಡ್ಯ : ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಮಂಗಳವಾರ ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮದ್ದೂರು ಪಟ್ಟಣದ ಕೊಲ್ಲಿ ವೃತ್ತದಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ತಾಲೂಕು ಕಚೇರಿ ಮುಂಭಾಗ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಕೃತಿ ದಹಿಸಿದ ಕಾರಣ ಕೆಲಕಾಲ ಹೆದ್ದಾರಿ ಸಂಚಾರ ತಡೆದು, ಪ್ರಧಾನಮಂತ್ರಿ ನರೇಂದ್ರಮೋದಿ, ಅಮಿತ್ ಷಾ ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಶಾಸಕ ಕೆ.ಎಂ.ಉದಯ್ ಮಾತನಾಡಿ, ಜನಪರವಾಗಿ ಕೆಲಸ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರದ ಕೈಗೊಂಬೆಯಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಯಾರಿಂದಲ್ಲೂ ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಮೈತ್ರಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟ ಹೆಚ್ಚಿನ ಸ್ಥಾನಗಳನ್ನು ಪಡೆದು ಎನ್.ಡಿ.ಎ ಗೆ ಪ್ರಬಲ ಪೈಪೋಟಿ ನೀಡಿದ ಪರಿಣಾಮ ನರೇಂದ್ರಮೋದಿ ಹಾಗೂ ಅಮಿತ್ ಷಾ ಅವರು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ಕ್ರಮ ಸರಿಯಲ್ಲ ಎಂದರು.
ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆಯುತ್ತೇನೆ ಎಂದುಕೊಂಡಿದ್ದ ಬಿಜೆಪಿ 240 ಸ್ಥಾನಗಳನ್ನು ಪಡೆದು ಭ್ರಮನಿರಸಗೊಂಡಿದೆ. ಹೀಗಾಗಿ ರಾಜ್ಯಪಾಲರನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡಲು ಮುಂದಾಗಿರುವುದು ತರವಲ್ಲ. ರಾಜ್ಯದ ಜನರ ಆಶೀರ್ವಾದದಿಂದ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಜನಪರವಾಗಿ ಕೆಲಸ ಮಾಡುತ್ತಾ ಯಾವುದೇ ಹಗರಣ ಮಾಡಿಲ್ಲ. ಅವರ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಅವರಿಗೆ ರಾಜ್ಯದ ಜನರ ಆಶೀರ್ವಾದ ಇರುವುದರಿಂದ ನ್ಯಾಯಾಲಯದಲ್ಲಿ ಅವರಿಗೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿ ಇದ್ದುಕೊಂಡು ಅನ್ಯಾಯವಾದಾಗ ನ್ಯಾಯಕೊಡಿಸಬೇಕು ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಮಾಡುವ ಬದಲು ರಾಜೀನಾಮೆ ನೀಡಿದರೆ ಅವರ ಸ್ಥಾನಕ್ಕೆ ಗೌರವ ಬರುತ್ತದೆ ಎಂದು ಸಲಹೆ ನೀಡಿದರು.
ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕದಲೂರು ರಾಮಕೃಷ್ಣ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಲಿಂಗಯ್ಯ, ಕಾಂಗ್ರೆಸ್ ಜಿಪಂ ಮಾಜಿ ಅಧ್ಯಕ್ಷ ಕಂಠಿ ಸುರೇಶ್, ಜಿ.ಪಂ ಮಾಜಿ ಸದಸ್ಯ ರಾಜೀವ್, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ಪುರಸಭಾ ಸದಸ್ಯ ಎಂ.ಬಿ.ಸಚಿನ್, ಸಿದ್ದರಾಜು, ಮುಖಂಡರಾದ ದಾಸೇಗೌಡ, ಸಂತೋಷ್, ಪ್ರೀತಂ, ಲಿಂಗನದೊಡ್ಡಿ ರಾಮಕೃಷ್ಣ, ಸಿ.ನಾಗೇಗೌಡ, ಚಿದಂಬರ್, ಅರುಣ್, ಎಂ.ಪಿ.ಅಮರ್ ಬಾಬು, ಪೈರೋಜ್, ಮಾದೇಶ, ತಿಮ್ಮೇಗೌಡ, ಹೊಂಬಾಳಯ್ಯ, ಚಿಕ್ಕಮರಿಯಪ್ಪ, ಮರಿಗೌಡ್ರು, ಆರ್.ಮಹೇಶ್ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
‘ಆಯುರ್ವೇದ ವೈದ್ಯ’ರು ‘ನಕಲಿ ವೈದ್ಯ’ರೇ? ಇಲ್ಲಿದೆ ನಿಮ್ಮ ಪ್ರಶ್ನೆಗೆ ಸಂಪೂರ್ಣ ಉತ್ತರ | Ayush Doctor
‘ಸಿದ್ದರಾಮಯ್ಯ’ ಅವರದು ಹೆದರುವ ರಕ್ತವಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್