ಬೆಂಗಳೂರು : ಕರ್ನಾಟಕ ಸಹಕಾರಿ ಅಫೆಕ್ಸ್ ಬ್ಯಾಂಕ್‌ನಿಂದ 439 ಕೋಟಿ ರೂ. ಸಾಲ ಪಡೆದು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್ ಅನುಮತಿ ನೀಡಿದೆ.
ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯಲ್ಲಿ ಜಾರಕಿಹೊಳಿ ಅವರನ್ನು ದೋಷಮುಕ್ತಗೊಳಿಸಲಾಗಿದಿಯೇ? ಇಲ್ಲವೇ, ಆರೋಪಿಯನ್ನಾಗಿಸಲಾಗಿದೆಯೇ ಎಂದು ವಿಚಾರಣೆ ವೇಳೆ ಸರ್ಕಾರದ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ವಕೀಲರು, ಪ್ರಕರಣ ಸಂಬಂಧ 2,000 ಪುಟಗಳ ಆರೋಪ ಪಟ್ಟಿ ಸಿದ್ಧಪಡಿಸಿದ್ದು, ಅರ್ಜಿದಾರರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಿಪಡಿಸಿ, ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಎಫ್‌ಐಆರ್ ಪ್ರಶ್ನಿಸಿ ಈ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಪ್ರಸ್ತುತ ಅರ್ಜಿಯ ಮೂಲ ಉದ್ದೇಶ ವಿಫಲವಾಗಲಿದೆ ಎಂದು ವಾದ ಮಂಡಿಸಿದರು.