ಬೆಂಗಳೂರು: ಮುಳಬಾಗಿಲು ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ ಎದುರಾಗಿದ್ದು, 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರಕ್ಕೆ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿದ್ದ ಅಂದಿನ ಶಾಸಕ ಜಿ.ಮಂಜುನಾಥ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ತಿಳಿದುಬಂದಿದೆ.
ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಕ್ಷೇತ್ರವನ್ನು ಕಸಿದುಕೊಳ್ಳುವ ಮೂಲಕ ಮಂಜುನಾಥ್ ಪರಿಶಿಷ್ಟ ಜಾತಿಗಳ ವರ್ಗಕ್ಕೆ ವಂಚಿಸಿದ್ದಾರೆ. ಇದು ಸಂವಿಧಾನಕ್ಕೆ ಎಸಗಿದ ಮೋಸ. ಹೀಗಾಗಿ, ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ವರದಿಯಲ್ಲಿ ಹೈಕೋರ್ಟ್ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ’ ಎಂದು ತಿಳಿಸಿದೆ. ಅಂತೆಯೇ, ‘ಮಂಜುನಾಥ್ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸರ್ಕಾರವೇ ನಿರ್ಧರಿಸಬೇಕು ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಜಾತಿ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ಕೈಗೊಂಡಿದ್ದ ನಿರ್ಣಯವನ್ನು ಪ್ರಶ್ನಿಸಿ ಸದ್ಯ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಕಾಂಗ್ರೆಸ್ ಪಕ್ಷದ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತ ತೀರ್ಪು ಪ್ರಕಟಿಸಿದೆ.