ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ತನಿಖೆ ಸಮ್ಮತಿಯನ್ನು ಹಿಂಪಡೆದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಹೌದು ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸಮ್ಮತಿಯನ್ನು ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ಹಿಂಪಡೆದಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೈ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಇಂದು ವಿಚಾರಣೆ ನಡೆಸಿದ ಹೈ ಕೋರ್ಟಿನ ನ್ಯಾಯಧೀಶರಾದ ನ್ಯಾ. ಸೋಮಶೇಖರ್ ಹಾಗೂ ನ್ಯಾ. ಉಮೇಶ್ ಎಂ. ಅಡಿಗರಿದ್ದ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆಯಿತು. ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ಇದೀಗ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.