ನವದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ವಿರುದ್ಧ ಚೈಬಾಸಾದ ನ್ಯಾಯಾಲಯ ಹೊರಡಿಸಿದ್ದ ಜಾಮೀನು ರಹಿತ ಬಂಧನ ವಾರಂಟ್ ಕಾರ್ಯಾಚರಣೆಗೆ ಜಾರ್ಖಂಡ್ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.
ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಹಾಜರಾಗದ ಮತ್ತು ಹೇಳಿಕೆಗಾಗಿ ಚೈಬಾಸಾದ ವಿಶೇಷ ನ್ಯಾಯಾಲಯವು ಫೆಬ್ರವರಿ 27 ರಂದು ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು.
ನಂತರ,,ರಾಹುಲ್ ಗಾಂಧಿ ಈ ಆದೇಶವನ್ನು ಇಲ್ಲಿನ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಕಾರ್ಯಾಚರಣೆಗೆ 30 ದಿನಗಳ ತಡೆ ನೀಡಿದೆ.
2019 ರ ಲೋಕಸಭಾ ಚುನಾವಣೆಗೆ ಮೊದಲು ಚೈಬಾಸಾದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.
ಚೈಬಾಸಾದ ಪ್ರತಾಪ್ ಕುಮಾರ್ ಎಂಬುವವರು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು.
ರಾಹುಲ್ ಗಾಂಧಿ ಅವರ ಹೇಳಿಕೆಗಳು ಮಾನಹಾನಿಕರವಾಗಿವೆ ಮತ್ತು ಶಾ ಅವರ ವರ್ಚಸ್ಸನ್ನು ಕೆಡಿಸಲು ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಕುಮಾರ್ ಚೈಬಾಸಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ