ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಅದೇ ರೀತಿಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಭಾರಿ ಮಳೆ ಆಗುತ್ತಿದ್ದು ಅಲ್ಲಿನ ಎರಡು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದೇ ರೀತಿಯಾಗಿ ಭಾರಿ ಮಳೆ ಮುಂದುವರೆದರೆ ಇನ್ನೂ ಕೆಲವು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ.
ಉಡುಪಿಯಲ್ಲಿ ಜನ ಜೀವನ ಅಸ್ತವ್ಯಸ್ಥ
ಉಡುಪಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಉಡುಪಿ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಹಲವು ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಸೊತ್ತುಗಳು ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ನೆರೆ ಯಿಂದ ಸಿಲುಕಿರುವ ಮನೆಗಳಿಂದ 30ಕ್ಕೂ ಅಧಿಕ ಮಂದಿಯನ್ನು ಅಗ್ನಿಶಾಮಕ ದಳ, ನಗರಸಭೆ ಸಿಬ್ಬಂದಿ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಕೆಲವರು ಸಂಬಂಧಿಕರ ಮನೆಗೆ ತೆರಳಿದರೆ, ಇನ್ನು ಕೆಲವರಿಗೆ ನಗರಸಭೆಯಿಂದ ವಸತಿ ವ್ಯವಸ್ಥೆ ಮಾಡಲಾಗಿದೆ.