ಬೆಂಗಳೂರು:ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯ ಮುಖ್ಯಾಂಶಗಳನ್ನು ಮುಂದಿದೆ ಓದಿ.
• ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ನಿರ್ಧರಿಸಲಾಯಿತು.
• ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.
• ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.
• ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.
• ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂಕೋರ್ಟ್ನಲ್ಲಿ ಎಸ್ಎಲ್ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿತ್ತು.ʼʼ
• ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಶರಣಬಸಪ್ಪ ಗೌಡ ದರ್ಶನಾಪುರ, ಮಹಾದೇವಪ್ಪ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನ್ಯಾಯವಾದಿ ಮೋಹನ್ ಕಾತರ್ಕಿ ಮತ್ತಿತರರು ಉಪಸ್ಥಿತರಿದ್ದರು.
BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಸಾಲ ತೀರಿಸಲಾಗದೆ ಕಾರು ಚಾಲಕ ಆತ್ಮಹತ್ಯೆ!
BREAKING: ‘ಪಾಕಿಸ್ತಾನದ ಹಡಗು’ಗಳು ಭಾರತದ ಬಂದರು ಪ್ರವೇಶ ನಿಷೇಧಿಸಿ ‘ಕೇಂದ್ರ ಸರ್ಕಾರ’ ಆದೇಶ