ಬೆಂಗಳೂರು: ಪ್ರಾಣಿಗಳಲ್ಲಿ ಕಾಣಿಸಿಕೊಳ್ಳುವಂತ ಗ್ಲಾಂಡರ್ಸ್ ರೋಗವು ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿನ ಕುದುರಿಯೊಂದರಲ್ಲಿ ಪತ್ತೆಯಾಗಿದೆ. ಹೀಗಾಗಿ ಡಿ.ಜೆ ಹಳ್ಳಿ ಸುತ್ತಮುತ್ತಲಿನ ಪ್ರದೇಶವನ್ನು ರೋಗಪೀಡಿತ ವಲಯ ಎಂಬುದಾಗಿ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿಯ ಖಲೀದ್ ಷರೀಫ್ ಎಂಬುವರಿಗೆ ಸೇರಿದಂತೆ ಕುದುರೆಗೆ ಗ್ಲಾಂಡರ್ಸ್ ರೋಗ ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂಬುದಾಗಿ ತಿಳಿಸಿದೆ.
ಗ್ಲಾಂಡರ್ಸ್ ರೋಗ ದೃಢಪಟ್ಟ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿ.ಜೆ ಹಳ್ಳಿ ಸುತ್ತಾಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯನ್ನು ರೋಗಪೀಡಿತ ವಲಯ ಎಂಬುದಾಗಿ ಗುರುತಿಸಲಾಗಿದೆ. 5 ರಿಂದ 25 ಕಿಲೋಮೀಟರ್ ಪ್ರದೇಶದವನ್ನು ಜಾಗೃತ ವಲಯ ಎಂಬುದಾಗಿ ನಿಗದಿ ಪಡಿಸಿರೋದಾಗಿ ಹೇಳಿದೆ.
ಪಶು ಸಂಗೋಪನೆ ಹಾಗೂ ಹೈನುಗಾರಿಕಾ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಕುದುರೆ, ಕತ್ತೆ ಹಾಗೂ ಹೇಸರಗತ್ತೆಗಳ ಚಲನವಲನದ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂಬುದಾಗಿ ತಿಳಿಸಿದೆ.
ಅಂದಹಾಗೇ ಗ್ಲಾಂಡರ್ಸ್ ಒಂದು ಸಾಂಕ್ರಾಮಿಕ ಹಾಗೂ ಮಾರಣಾಂತಿಕ ಕಾಯಿಲೆ. ಇದು ಸಾಮಾನ್ಯವಾಗಿ ಕುದುರೆಗಳು, ಕತ್ತೆಗಳು ಮತ್ತು ಹೇಸರಗತ್ತೆಗಳಲ್ಲಿ ಹೆಚ್ಚಾಗಿ ಕಂಡುಬರುತ್ತೆ. ಇದು ಬರ್ಖೋಲ್ಡೆರಿಯಾ ಮಲ್ಲಿ ಎಂಬ ಬ್ಯಾಕ್ಟೀರಿಯಂದಿಂದ ಉಂಟಾಗುತ್ತದೆ. ಇದು ಶ್ವಾಸನಾಳ ಮತ್ತು ಶ್ವಾಸಕೋಶಗಳಲ್ಲಿ ಗಂಟುಗಳು ಮತ್ತು ಹುಣ್ಣು ಉಂಟುಮಾಡುತ್ತದೆ. ಇದನ್ನು ಫಾರ್ಸಿ ಎಂದು ಕರೆಯಲಾಗುತ್ತದೆ. ಇದು ಉಲ್ಬಣವಾದರೆ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿದೆ. ಅಲ್ಲದೇ ಈ ಗ್ಲಾಂಡರ್ಸ್ ರೋಗ ಜೂನೋಟಿಕ್ ಕಾಯಿಲೆಯಾಗಿದ್ದು, ಇದು ಮನುಷ್ಯರಿಗೂ ಹರಡುವ ಸಾಧ್ಯತೆ ಇದೆ ಎಂಬುದಾಗಿ ಹೇಳಲಾಗುತ್ತಿದೆ.