ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸಿದ್ರಾಮುಲ್ಲಾ ಖಾನ್ ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯ ಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಭಾರತೀಯ ಜನತಾ ಪಕ್ಷ ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿ ನಡೆಸುತ್ತಿರುವ ಅಪ ಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾತನಾಡಿ ಅವರು, ಇಂತಹ ಅಪ ಪ್ರಚಾರವಲ್ಲದೇ ಅವರಾದರೂ ಬೇರೆ ಏನು ಮಾಡಲು ಸಾಧ್ಯ? ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳನ ಮಸಿ ಬಳಿದುಕೊಂಡ ಮುಖವನ್ನು ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ? ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿ ಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆ ಸೂಚಿಸುತ್ತದೆ ಎಂದು ಹೇಳಿದ್ದಾರೆ.
ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಪಕ್ಷ ಇಂತಹ ನೈತಿಕ ಅಧ:ಪತನಕ್ಕೆ ಬಿದ್ದಿರುವುದರ ಬಗ್ಗೆ ನಾವೆಲ್ಲ ಸಾಮೂಹಿಕವಾಗಿ ಸಂತಾಪ ಸೂಚಿಸೋಣ. ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ.