ಬೆಂಗಳೂರು, ಡಿಸೆಂಬರ್ 24: ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಒಂದು ಸಲ್ಲಿಕೆಯಾಗಿದ್ದು, ಅದರಲ್ಲಿ ನನ್ನನ್ನು ಕೂಡ ಪಾರ್ಟಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ತಿಳಿಸಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಈ ಅರ್ಜಿಯಲ್ಲಿ ರಾಜ್ಯ ಸರ್ಕಾರ, ಕೆಲವು ರೈತರು ಹಾಗೂ ನನ್ನನ್ನೂ ಸೇರಿಸಿ ಪಾರ್ಟಿ ಮಾಡಲಾಗಿದೆ ಎಂದರು.
ನಾನು ಈ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು. ಆಗ ಯೋಜನೆಗೆ ಒಪ್ಪಂದ (ಎಂಓಯು) ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಈ ಯೋಜನೆಯು ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿತ್ತು. ಐದು ಟೌನ್‌ಶಿಪ್ ಗಳು, ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ. ನೈಸ್ ಕಂಪನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ ರೂಪಾಯಿ ಕೊಡುತ್ತಿದ್ದಾರಂತೆ. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ಕಾನೂನು ಸಲಹೆಗಾರರು ಇದ್ದರೂ ಸಹ ಇನ್ನೊಬ್ಬರನ್ನು ನೈಸ್ ಕಂಪನಿಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು.
ನನಗೆ ಇನ್ನೂ ಹೋರಾಟದ ಕೆಚ್ಚಿದೆ. ಹೋರಾಟ ಮಾಡುವ ಶಕ್ತಿ ಇದೆ. ಒಂದು ಲಕ್ಷಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆ ಮೂಲಕ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಹುದ್ದೆಗಳು ಭರ್ತಿಯಾಗದೇ ಹಾಗೆಯೇ ಖಾಲಿ ಉಳಿದಿವೆ. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರೆ ಎಷ್ಟು ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ದೇವೇಗೌಡರು ದೂರಿದರು.
ಈಗಿನ ಮುಖ್ಯಮಂತ್ರಿಗಳಿಗೆ ಬಡವರ ಬಗ್ಗೆ ಎಲ್ಲಿಲ್ಲದ ಅನುಕಂಪ ಇದೆ. ಮುಖ್ಯಮಂತ್ರಿ ಕಚೇರಿಯಲ್ಲೇ ಏಳೆಂಟು ಮಂದಿ ಕ್ಯಾಬಿನೆಟ್ ದರ್ಜೆ ಪಡೆದುಕೊಂಡು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದು ಇವರ ಆಡಳಿತದ ವೈಖರಿ ಎಂದು ದೇವೇಗೌಡರು ಲೇವಡಿ ಮಾಡಿದರು.
ಕೇಂದ್ರವನ್ನು ದೂರಿದರೆ ಪ್ರಯೋಜನ ಇಲ್ಲ:
ರಾಜ್ಯ ಸರ್ಕಾರ ಪ್ರತೀ ವಿಷಯಕ್ಕೂ ಕೇಂದ್ರ ಸರ್ಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ. ಅದರಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಕೇಂದ್ರ ಸರ್ಕಾರದಲ್ಲಿ ಡಾ. ಮನಮೋಹನ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರೈತರ ಸಾಲದ ಮೇಲಿನ ಸುಸ್ತಿ ಬಡ್ಡಿ ಮನ್ನಾ ಮಾಡಲು ಪತ್ರ ಬರೆದಾಗ ಕೇಂದ್ರ ಮನಮೋಹನ್ ಸಿಂಗ್, ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್, ನಬಾರ್ಡ್ ಯಾರೂ ಕೂಡ ಒಪ್ಪಿಗೆ ಕೊಡಲಿಲ್ಲ ಎಂದು ದೇವೇಗೌಡರು ಹೇಳಿದರು.
ಈಗ ನೋಡಿದರೆ ರಾಜ್ಯ ಸರ್ಕಾರ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿದೆ. ಹೀಗೆ ಟೀಕೆ ಮಾಡುತ್ತಾ ಹೋದರೆ ಆಗುವ ಪ್ರಯೋಜನ ಏನು? ಮುಖ್ಯಮಂತ್ರಿ ಆದವರು ಪ್ರಧಾನಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಿಶಾ ಸಭೆಗೆ ಹೋಗಿ ರಾಜ್ಯಕ್ಕೆ ಏನು ಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿ ಹೋರಾಟ ಮಾಡಬೇಕು. ಸಂಸದರಾಗಿ ನಾವು ನಮ್ಮ ಕರ್ತವ್ಯ ನಿಭಾಯಿಸುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಪಕ್ಷದ ಸಮಾವೇಶಗಳನ್ನು ಮಾಡುತ್ತೇವೆ:
ಜನವರಿ 30ರಂದು ಸಂಸತ್‌ನ ಜಂಟಿ ಅಧಿವೇಶನ ಶುರುವಾಗುತ್ತಿದ್ದು, ಅದಕ್ಕೂ ಮೊದಲೇ ಜನವರಿ 23ರಿಂದ 25ರ ನಡುವೆ ಹಾಸನ ಹಾಗೂ ಬಾಗಲಕೋಟೆ ಭಾಗದಲ್ಲಿ ಪಕ್ಷದ ವತಿಯಿಂದ ತಲಾ ಒಂದು ಸಮಾವೇಶ ನಡೆಸಲಾಗುವುದು. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ರಾಜ್ಯ ಸರ್ಕಾರದ ವೈಫಲ್ಯಗಳು ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಕಾರ್ಯಕ್ರಮಗಳನ್ನು ಮುಂದುವರೆಸದಿರುವುದರ ಬಗ್ಗೆ ಸಮಾವೇಶದಲ್ಲಿ ಪ್ರಸ್ತಾಪಿಸಲಾಗುವುದು ಎಂದರು ಅವರು.
ನರೇಗಾ: ಗಾಂಧೀಜಿ ಮೇಲೆ ಕಾಂಗ್ರೆಸ್ ಅಕ್ಕರೆ ಬಗ್ಗೆ ಗೊತ್ತಿದೆ!!
ನರೇಗಾ ಯೋಜನೆ ಹೆಸರನ್ನು ಬದಲಾವಣೆ ಮಾಡಿದರು ಎನ್ನುವ ಕಾರಣಕ್ಕೆ ಕಾಂಗ್ರೆಸ್ ನಾಯಕರು ನರೇಂದ್ರ ಮೋದಿ ಅವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ನವರು ಆಡಳಿತ ನಡೆಸುತ್ತಿದ್ದಾಗ ಮಹಾತ್ಮ ಗಾಂಧೀಜಿ ಅವರಿಗೆ ಎಷ್ಟು ಗೌರವ ನೀಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿಗಳಾದ ದೇವೇಗೌಡರು ಕಟುವಾಗಿ ಟೀಕಿಸಿದ್ದರು.
ನರೇಗಾ ಹೆಸರು ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ಪ್ರತಿರೋಧ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಮಹಾತ್ಮಾ ಗಾಂಧಿ ಅವರ ಬಗ್ಗೆ ಇಷ್ಟೊಂದು ಕಾಳಜಿ, ಕಳಕಳಿ ಇರುವವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಆಳ್ವಿಕೆ ಮಾಡಿದ ಸಂದರ್ಭದಲ್ಲಿ ಎಲ್ಲಿಯಾದರೂ ಗಾಂಧೀಜಿ ಅವರ ಒಂದು ಪೋಸ್ಟರ್ ನೋಡಿದೀರಾ? ಎಲ್ಲಿಯಾದರೂ ಮಹಾತ್ಮಾ ಗಾಂಧಿ ಅವರ ಫೋಟೋ ಇಟ್ಟುಕೊಂಡು ಚುನಾವಣೆ ನಡೆಸಿದ್ದಾರಾ? ಎಂದು ಕಿಡಿಕಾರಿದರು.
ಈಗ ನೋಡಿದರೆ ಕಾಂಗ್ರೆಸ್ ನವರು ಇಷ್ಟು ಜೋರಾಗಿ ಪ್ರತಿಭಟನೆ ಮಾಡುತ್ತಿದ್ದಾರೆ! ಕರ್ನಾಟಕದ ಗ್ಯಾರಂಟಿ ಬಿಹಾರದವರೆಗೂ ಹೋಯಿತು. ಅಲ್ಲಿ ವರ್ಕ್ ಆಗಲಿಲ್ಲ. ಮೋದಿ ಅವರಿಗೆ ದೇಶ ನಡೆಸಲು ಗೊತ್ತು. ಎಲ್ಲೆಲ್ಲಿ ಹಣ ಪೋಲಾಗ್ತಾ ಇದೆ ಅಂತ ಕೂಡ ಅವರಿಗೆ ಗೊತ್ತು. ಯಾವ ರಾಜ್ಯ ಹೇಗೆಲ್ಲಾ ಹಣ ಖರ್ಚು ಮಾಡುತ್ತಿದೆ ಎಂಬುದು ಕೂಡ ಅವರಿಗೆ ಗೊತ್ತು. ನಾನೇನು ಮೋದಿ ಅವರನ್ನು ಹೊಗಳಲು ಬಂದಿಲ್ಲ ಎಂದು ಅವರು ಹೇಳಿದರು.
ನರೇಗಾಗೆ 60:40 ಅನುಪಾತದಲ್ಲಿ ಅನುದಾನ ಹಂಚಿಕೆ ಮಾಡಿದ್ದಾರೆ. ಕೆಲಸದ ದಿನಗಳನ್ನು ಹೆಚ್ಚು ಮಾಡಿದ್ದಾರೆ. ರಾಮನ ಹೆಸರು ಇಟ್ಟುಕೊಂಡಿದ್ದಾರೆ ಅಂತಾರೆ. ನಮ್ಮ ಮನೆಗೆ ಬನ್ನಿ, ರಾಮ ಕೃಷ್ಣಾ ವೆಂಕಟೇಶ್ವರ ಎಲ್ಲರ ಫೋಟೋಗಳು ಇವೆ.ರಾಮ ಪುರುಷೋತ್ತಮ ಅಂತ ವಾಲ್ಮೀಕಿ ಹೇಳಿದ್ದಾರೆ. ಇದರ ಬಗ್ಗೆ ಇಷ್ಟು ಜಿಜ್ಞಾಸೆ ಯಾಕೆ? ಎಂದು ಮಾಜಿ ಪ್ರಧಾನಿಗಳು ಅಭಿಪ್ರಾಯಪಟ್ಟರು. ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿ ಗೌಡ, ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ ಮುಂತಾದವರು ಹಾಜರಿದ್ದರು.








