ಬೆಂಗಳೂರು : ಎಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಸಮಿತಿ ಸಭೆಯ ವಿಚಾರವಾಗಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಿರುವುದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಿದೆ. ಅಕಸ್ಮಾತ್ ಪರಿಶಿಷ್ಟ ರ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಲಿ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸವಾಲು ಹಾಕಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಚಾಂಪಿಯನ್ ಅನ್ನುವ ಭ್ರಮೆಯಲ್ಲಿ ಇದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಪ್ರಧಾನಿ ಮೋದಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ರೀತಿ ಅದೃಷ್ಟ ಲಾಟರಿ ಸಿಎಂ ಆಗಿರಲಿಲ್ಲ. ಒಬಿಸಿ ಅಂತ ಹೇಳಿ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನ ಮಾಡಿಲ್ಲ ಎಂದರು.
ಬಿಜೆಪಿಯನ್ನು ಅಲ್ಪಸಂಖ್ಯಾತರ ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದು ಕಾಂಗ್ರೆಸ್ ಅಲ್ಲ. ಪರಿಶಿಷ್ಟರ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿ. ಇವರ ಯೋಗ್ಯತೆಗೆ ಅದು ಕೂಡ ಸಾಧ್ಯವೂ ಇಲ್ಲ ಎಂದು ಕಾಂಗ್ರೆಸ್ ವಿರುದ್ಧವಾಗಿ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.