ಮಂಡ್ಯ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದ ದಲಿತ ಸಂಘಟನೆಗಳ ಮುಖಂಡರಗಳನ್ನು ಪೋಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಘಟನೆ ಸೋಮವಾರ ಜರುಗಿತು.
ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ತಿಮ್ಮದಾಸ್ ಹೋಟೆಲ್ ಸಮೀಪ ಸಾಧನ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದರು. ಆದರೆ ಪೋಲೀಸರ ಮುಂಜಾಗೃತಾ ಕ್ರಮವಾಗಿ ಕಪ್ಪು ಬಾವುಟ ಪ್ರದರ್ಶನಕ್ಕೂ ಮುನ್ನವೇ ಬೆಳಿಗ್ಗೆ 10 ಗಂಟೆ ವೇಳೆಗೆ ಬಂಧಿಸಿ ಸಂಜೆ 4 ಗಂಟೆಗೆ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡಲಾಯಿತು.
ಎಸ್ಸಿಪಿ, ಟಿಎಸ್ಪಿ ಯೋಜನೆಯ 25 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವುದು, 7C ಕಾಲಂ, ಬ್ಯಾಕ್ ಲಾಗ್ ಹುದ್ದೆ ಭರ್ತಿ, ಮಾದಿಗ ಜನಾಂಗಕ್ಕೆ ಒಳ ಮೀಸಲಾತಿ ಜಾರಿಗೆ ತರುವಂತೆ ಒತ್ತಾಯಿಸಿ ಸೋಮನಹಳ್ಳಿ ಅಂದಾನಿ, ವೆಂಕಟಗಿರಿಯಯ್ಯ ಹಾಗೂ ಮರಳಿಗ ಶಿವರಾಜ್ ಅವರುಗಳ ನೇತೃತ್ವದಲ್ಲಿ ಮದ್ದೂರು ಪಟ್ಟಣದ ಮೂರು ಕಡೆ ಪ್ರತ್ಯೇಕವಾಗಿ ಪ್ರತಿಭಟನೆ ಮಾಡಲು ಮುಂದಾಗಿದ್ದ ಅಂದಾಜು 50 ಕ್ಕೂ ದಲಿತ ಸಂಘಟನೆಗಳ ಪದಾಧಿಕಾರಿಗಳನ್ನು ವಶಕ್ಕೆ ಪಡೆಯಲು ಮುಂದಾಗಿದ್ದ ಪೋಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕೆಲ ಕಾಲ ಮಾತಿನ ಚಕಮಕಿ ನಡೆಯಿತು.
ಅಂತಿಮವಾಗಿ ಪೋಲೀಸರು ಪ್ರತಿಭಟನಾಕಾರರನ್ನು ಬೆಸಗರಹಳ್ಳಿ ಬಳಿಯ ಶ್ರೀ ಸೋಮೇಶ್ವರ ಸಮುದಾಯ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಶದಲ್ಲಿರಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಿದ ಬಳಿಕ ಬಿಡುಗಡೆ ಮಾಡಿದರು.
ವರದಿ : ಗಿರೀಶ್ ರಾಜ್, ಮಂಡ್ಯ
ರಾಜ್ಯದಲ್ಲಿ ರೈತರಿಗೆ ಬೇಕಾದ ಯೂರಿಯಾ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲ: ಕೆ.ಅಭಿನಂದನ್ ಕಿಡಿ
BREAKING: ಬೆಂಗಳೂರು ಕಾಲ್ತುಳಿತ ದುರಂತ: ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿಗಳ ಅಮಾನತು ರದ್ದು