ಮಂಡ್ಯ :- ಜಿಲ್ಲೆಯಲ್ಲಿಯೇ ಮದ್ದೂರು ಪಟ್ಟಣದಲ್ಲಿ ಕಾಂಗ್ರೆಸ್ ಭವನದ ಸ್ವಂತ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡುತ್ತಿರುವುದು ಅತೀವ ಸಂತಸ ತಂದಿದೆ ಎಂದು ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಶುಕ್ರವಾರ ಹೇಳಿದರು.ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ ಬಳಿ ಕಾಂಗ್ರೆಸ್ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರೆವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆ ಮೇರೆಗೆ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಪ್ರತಿಯೊಂದು ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಮಾಡಲು ಸೂಚನೆ ನೀಡಲಾಗಿದೆ.
ಹೀಗಾಗಿ ಮಂಡ್ಯ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಸ್ವಂತ ಕಟ್ಟಡ ನಿರ್ಮಾಣವಾಗಿಲ್ಲ. ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರ ಮುತುವರ್ಜಿಯಿಂದ ಶಾಸಕರಾದ ಕೇವಲ ಎರಡು ವರ್ಷಗಳಲ್ಲೆ ಅವರು ಜಿಲ್ಲೆಯಲ್ಲೇ ಮೊದಲ ಕಾಂಗ್ರೆಸ್ ಕಟ್ಟಡ ನಿರ್ಮಾಣಕ್ಕೆ ತಮ್ಮ ಸ್ವಂತ ನಿವೇಶನ ನೀಡುವ ಮೂಲಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಅವರಿಗೆ ಪಕ್ಷದ ವತಿಯಿಂದ ಹಾಗೂ ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಕಾಂಗ್ರೆಸ್ ಪಕ್ಷದ ಭವನದ ನಿರ್ಮಾಣ ಕಾರ್ಯ ಒಂದು ವರ್ಷದಲ್ಲಿ ಮುಗಿಯಬೇಕು.
ಹೀಗಾಗಿ ಮುಖಂಡರು ಹಾಗೂ ಕಾರ್ಯಕರ್ತರು ಶಕ್ತಿ ಮೀರಿ ಎಲ್ಲರೂ ವಂತಿಗೆ ನೀಡಬೇಕು. ಕಾರ್ಯಕರ್ತರ ವಂತಿಗೆ ಹಣದಿಂದಲೇ ಈ ಭವನ ನಿರ್ಮಾಣವಾಗುತ್ತದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಸೇರಿದಂತೆ ಎಲ್ಲರೂ ಶ್ರಮ ಹಾಗೂ ಮುತುವರ್ಜಿ ವಹಿಸಿ ಕಟ್ಟಡವನ್ನು ಒಂದು ವರ್ಷದೊಳಗೆ ನಿರ್ಮಾಣವಾಗುವಂತೆ ವ್ಯವಸ್ಥೆ ಮಾಡಬೇಕು. ಕಾರ್ಯಕರ್ತರು ಕೂಡ ಎಲ್ಲ ರೀತಿಯ ಸಹಕಾರವನ್ನು ನೀಡಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಘಟನೆ ಕುರಿತು ಮಾತನಾಡಿ, ಶ್ರೀ ಕ್ಷೇತ್ರ ಒಂದು ಪವಿತ್ರ ಸ್ಥಳವಾಗಿದೆ. ರಾಜ್ಯ, ದೇಶ ಹಾಗೂ ವಿದೇಶಗಳಲ್ಲಿ ಮಂಜುನಾಥಸ್ವಾಮಿಯ ಭಕ್ತಾದಿಗಳು ಇದ್ದಾರೆ. ಹೀಗಾಗಿ ಕ್ಷೇತ್ರಕ್ಕೆ ಯಾವುದೇ ಅಪಕೀರ್ತಿ ಬಾರದ ರೀತಿಯಲ್ಲಿ ನೋಡಿಕೊಳ್ಳಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಈ ನಿಟ್ಟಿನಲ್ಲಿ ಕ್ಷೇತ್ರದ ಮೇಲೆ ಬಂದ ಕೆಲವೊಂದು ಆರೋಪಗಳಿಗೆ ಸಾರ್ವಜನಿಕರಿಗೆ ಮುಕ್ತವಾಗಿ ಇಡಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.
ಇನ್ನು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ತನಿಖೆಗೆ ವಿರೋಧಿಸಿ ವಿಪಕ್ಷಗಳು ಆ.17 ರಂದು ಹಮ್ಮಿಕೊಂಡಿರುವ ಪ್ರತಿಭಟನೆ ಕುರಿತು ಮಾತನಾಡಿ, ಇದು ರಾಜಕೀಯ ವಸ್ತುವಲ್ಲ ಧರ್ಮ ನಂಬಿಕೆಯ ವಿಚಾರವಾಗಿದ್ದು, ಆದಷ್ಟು ಬೇಗ ಸತ್ಯಾಂಶ ಹೊರಬೀಳಲಿದೆ ಎಂದರು.
ವರದಿ : ಗಿರೀಶ್ ರಾಜ್ ಮಂಡ್ಯ