ಬೆಂಗಳೂರು: ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದ್ದಾನೆ, ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ಧರ್ಮ, ಸಂಸ್ಕೃತಿ ಪಾಲನೆ ವಿಚಾರವಾಗಿ ನಮಗೆ ಯಾರೂ ಹೇಳಿಕೊಡುವುದೂ ಬೇಡ, ಒತ್ತಡ ಹಾಕುವುದೂ ಬೇಡ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಮಾಡಬಾರದು. ಶ್ರೀರಾಮ ಅವರಪ್ಪನ ಮನೆ ಆಸ್ತಿನಾ ಎಂಬುದಾಗಿ ಬಿಜೆಪಿ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ಕೆಂಡಾಮಂಡಲವಾಗಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು ಬಂದಿದ್ದೇವೆ. ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ ಎಂದು ತಿಳಿಸಿದರು.
ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ? ಎಂದು ಪ್ರಶ್ನಿಸಿದರು.
ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೆ, ಪೂಜೆ ನೂರಾದರೂ ಭಕ್ತಿವೊಂದೇ, ಕರ್ಮ ಹಲವಾದರೂ ನಿಷ್ಠೇವೊಂದೇ, ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ ಎಂದರು.
ನಮ್ಮ ಸರ್ಕಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಹಜ್ ಸಮಿತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಇದೆ. ಸಂವಿಧಾನದ ಪರವಾಗಿ ನಾವು ಎಲ್ಲಾ ಧರ್ಮಕ್ಕೂ ಆದ್ಯತೆ ನೀಡುತ್ತಾ ಬಂದಿದ್ದೇವೆ. ಎಲ್ಲರಿಗೂ ಸಮಾನವಾಗಿ ಕಂಡು ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವದ ಮೇಲೆ ಆಡಳಿತ ಮಾಡುತ್ತಿದ್ದೇವೆ. ನಿಮ್ಮ ಕೈಯಲ್ಲು ಅಧಿಕಾರ ಇತ್ತು. ಆಗ ಜನಪರ ಕಾರ್ಯಕ್ರಮ ಯಾಕೆ ಮಾಡಲಿಲ್ಲ. ಈಗ ಅಧಿಕಾರ ಹೋದ ನಂತರ ಸಂಕಟಪಡುತ್ತಿದ್ದಾರೆ ಎಂದು ಹೇಳಿದರು.
ಈ ಸರ್ಕಾರ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಬಲಿಷ್ಠವಾಯಿತು. ಇದನ್ನು ಬಿಜೆಪಿ ಸಹಿಸಲು ಆಗುತ್ತಿಲ್ಲ. ನಾವೆಲ್ಲರೂ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆದ ಭಾರತ ಜೋಡೋ ಯಾತ್ರೆ ವೇಳೆ ರಾಜ್ಯದಲ್ಲಿ ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಲಾಯಿತು. ಇದರ ಯಶಸ್ಸಿನಿಂದಾಗಿ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಬಲಿಷ್ಠವಾದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಸೇವೆ ಅವಕಾಶ ಸಿಕ್ಕಿದೆ. ರಾಹುಲ್ ಗಾಂಧಿ ಅವರ ಯಾತ್ರೆಯಿಂದ ಬಿಜೆಪಿಯವರಿಗೆ ಭಯ ಹುಟ್ಟಿದೆ ಎಂದು ಕಿಡಿಕಾರಿದರು.
ನಾವು ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ಮಾಡಿದ್ದೆವು. ಆ ಸರ್ಕಾರವನ್ನು ಬೀಳಿಸಿದವರ ಜತೆಗೆ ಇಂದು ಜೆಡಿಎಸ್ ಸಖ್ಯ ಬೆಳೆಸಿದೆ. ಅನ್ಯಾಯ ಮಾಡಿದವರ ಜತೆ ಸೇರಿ ರಾಜಕಾರಣ ಮಾಡುತ್ತಿದ್ದಾರೆ. ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ ಯೋಜನೆಗಳು ಜನರಿಗೆ ನೆರವಾಗಿದೆ. ಅನ್ನಭಾಗ್ಯ ಯೋಜನೆ ಅಕ್ಕಿಯೇ ನಾವು ಜನರಿಗೆ ನೀಡುವ ಮಂತ್ರಾಕ್ಷತೆ. ನಾವು ಈ ಯೋಜನೆಗಳನ್ನು ಒಂದು ಜಾತಿ, ಧರ್ಮ, ಸಮುದಾಯ, ಪಕ್ಷದವರಿಗೆ ಮಾತ್ರ ನೀಡುತ್ತಿದ್ದೇವಾ? ಇದೇ ಕಾಂಗ್ರೆಸ್ ಪಕ್ಷದ ಬದ್ಧತೆ ಎಂದರು.
ವೀರಪ್ಪ ಮೊಯ್ಲಿಯನ್ನ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿ – ಆರ್.ಅಶೋಕ್ ಆಗ್ರಹ
ಜ.27ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ – ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್