ಮಂಡ್ಯ : ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯ ಸ್ವಾಮಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಜನರ ನೆಮ್ಮದಿ ಹಾಳು ಮಾಡುವ ಅವಶ್ಯಕತೆ ಇದೆಯಾ? ಎಂದು ಕಿಡಿ ಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ನೆಮ್ಮದಿ ಹಾಳು ಮಾಡಲು ಹೆಜ್ಜೆ ಇಟ್ಟಿದ್ದು ನೋವು ತಂದಿದೆ. ಜಿಲ್ಲೆಯಲ್ಲಿ ನೆಮ್ಮದಿ ಹಾಳು ಮಾಡುವ ಅವಶ್ಯಕತೆ ಇದೆಯಾ? ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡೋಕೆ ಹೊರಟಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ಕಿಡಿಕಾರಿದರು.ಎಚ್ ಡಿ ಕುಮಾರಸ್ವಾಮಿ ಸಿಎಂ ಆಗುವುದಕ್ಕೆ ಮಂಡ್ಯ ಜನರೇ ಕಾರಣ ಜಿಲ್ಲೆಯ ಜನರ ಆಶಿರ್ವಾದ ಕಾರಣ ಎಂಬುದನ್ನು ಎಚ್ ಡಿ ಕುಮಾರಸ್ವಾಮಿ ಮರೆತಿದ್ದಾರೆ ಎಂದರು.
ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ನೀವು ನಮ್ಮನ್ನು (ಸರ್ಕಾರವನ್ನು) ಸರಿಯಾದ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೇ ವಿನಃ ಶಾಂತಿ ಕದಡುವ ಕೆಲಸ ಮಾಡಬಾರದು. ಜಿಲ್ಲೆಯ ಜನರೇ ನಿಮಗೆ ಅಧಿಕಾರ ನೀಡಿದ್ದು. ಕಳೆದ ಬಾರಿಯ ಚುನಾವಣೆಯಲ್ಲಿ ನಮ್ಮನ್ನು ಆಶೀರ್ವದಿಸಿದ್ದಾರೆ. ಮುಂದೆ ನಾವು ಸರಿಯಾದ ದಾರಿಯಲ್ಲಿ ಸಾಗದಿದ್ದರೆ ನಮಗೂ ಜನ ಪಾಠ ಕಲಿಸಬಹುದು. ಇದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಿ. ಅದು ಬಿಟ್ಟು ಸಂವಿಧಾ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ ಎಂದು ಕುಮಾರಸ್ವಾಮಿ ಅವರನ್ನುದ್ದೇಶಿಸಿ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕೆರಗೋಡು ಗ್ರಾಮದ ಮಧ್ಯಭಾಗದಲ್ಲಿರುವ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜ ಮಾತ್ರ ಆರೋಹಣ, ಅವರೋಹಣ ಮಾಡುವುದಾಗಿ ಕರಾರು ಪತ್ರ ಬರೆಯಲಾಗಿದೆ. ಇದರಂತೆಯೇ ಅವರು ನಡೆದುಕೊಂಡಿದ್ದರು. ಆದರೆ, ನಂತರ ಅಲ್ಲಿ ಧರ್ಮದ ಧ್ವಜ ಆರೋಹಣ ಮಾಡಲು ಯಾರು ಪ್ರೇರೇಪಣೆ ಕೊಟ್ಟರೋ ತಿಳಿಯದು. ಚುನಾವಣೆ ಸಂದರ್ಭದಲ್ಲಿ ಅದರ ಲಾಭ ಪಡೆಯಲು ಮಾಡಿದ್ದಾರೋ ತಿಳಿಯದು ಎಂದು ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಗಮನದಲ್ಲಿಟ್ಟುಕೊಂಡು ಕುಮಾರಸ್ವಾಮಿ ಈ ರೀತಿ ಮಾಡುತ್ತಿದ್ದಾರೆ. ಇವರು ಸಿಂಗಾಪುರದಲ್ಲಿ ಕುಳಿತುಕೊಂಡು ಹೇಗೆಲ್ಲಾ ಮಾತನಾಡಿದ್ದರು ಎಂಬುದನ್ನು ಗಮನಿಸಿ. ಕುಮಾರಸ್ವಾಮಿಯವರು ಬಿಜೆಪಿಯನ್ನು ಟೀಕಿಸಿದಷ್ಟು ಬೇರೆ ಯಾರೂ ಟೀಕಿಸಿಲ್ಲ. ಜೆಡಿಎಸ್ನವರು ಟೀಕೆಮಾಡಿದಷ್ಟು ಕಾಂಗ್ರೆಸ್ ಕೂಡ ಮಾಡಿಲ್ಲ. ಇದೀಗ ಅವರಿಬ್ಬರೂ (ಜೆಡಿಎಸ್, ಬಿಜೆಪಿ) ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ದೇವೇಗೌಡರೇ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು ಎಂದು ಚಲುವರಾಯಸ್ವಾಮಿ ಹೇಳಿದರು.