ಹಾವೇರಿ : ಹಾವೇರಿಯಲ್ಲಿ ಇತ್ತೀಚೆಗೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸರ್ಕಾರದ ವಿರುದ್ಧ ಮಾಡಿದ್ದ ಆರೋಪಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯಿಲ್ಲ ಎಂದು ಬೊಮ್ಮಾಯಿ ಹೇಳಿದ್ದಕ್ಕೆ ಪ್ರತಿಯಾಗಿ, ಹಾವೇರಿ ಪ್ರಕರಣವಿನ್ನೂ ತನಿಖಾ ಹಂತದಲ್ಲಿದೆ. ತನಿಖಾ ವರದಿ ಬರುವುದಕ್ಕೂ ಮುಂಚೆಯೇ ಇಂಥ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು,ನಿರ್ಭಯಾ ಯೋಜನೆಯಡಿ ಮಹಿಳಾ ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಹಾವೇರಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ತನಿಖೆ ಇನ್ನು ಪೂರ್ಣಗೊಂಡಿಲ್ಲ. ಈ ಮೊದಲೇ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದರು