ಮಂಡ್ಯ : ಕನ್ನಡ ರಾಜ್ಯೋತ್ಸವ ನಮ್ಮ ಇತಿಹಾಸವನ್ನು ನೆನಪಿಸುವ ದಿನ ಮಾತ್ರವಲ್ಲ, ಅದು ನಮ್ಮ ಜವಾಬ್ದಾರಿಯನ್ನು ನೆನಪಿಸುವ ದಿನವೂ ಆಗಿದೆ. ನಮ್ಮ ರಾಜ್ಯವನ್ನು ಇನ್ನಷ್ಟು ಸುಂದರ, ಸಶಕ್ತ ಮತ್ತು ಸಮಾನತೆಯ ರಾಜ್ಯವನ್ನಾಗಿಹಿಸಲು ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ, ಬೇರೆ ಭಾಷೆಗಳನ್ನು ಕಲಿಯಿರಿ ಅವಶ್ಯಕತೆ ಇದ್ದಾಗ ಮಾತ್ರ ಮಾತನಾಡಿ ಆದರೆ, ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆಯ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಇರಲೇ ಬೇಕು, ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕೆಂದರು.
ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು ಗಮನಹರಿಸಬೇಕು. ನಮ್ಮ ರಾಜ್ಯದ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಕನ್ನಡಿಗರಾದ ನಮ್ಮೆಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ನಾವೆಲ್ಲರೂ ಕಂಕಣ ಬದ್ಧರಾಗೋಣ ಎಂದು ಕಿವಿಮಾತು ಹೇಳಿದರು.
ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವದ ಸಂದೇಶ ವಾಚಿಸಿ ಮಾತನಾಡಿದ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು, ನಮ್ಮ ಭಾಷೆ, ಸಂಸ್ಕೃತಿ, ಸಂಪ್ರದಾಯ ಇವೆಲ್ಲವನ್ನೂ ಒಟ್ಟುಗೂಡಿಸಿ ನಮ್ಮ ರಾಜ್ಯ ನಿರ್ಮಾಣವಾದ ಈ ದಿನ ನಮಗೆ ಬಹಳ ಹೆಮ್ಮೆಯ ದಿನ. ಕನ್ನಡ ಕೇವಲ ಭಾಷೆಯಲ್ಲಿ ಅದು ನಮ್ಮ ಅಸ್ತಿತ್ವ, ನಮ್ಮ ಆತ್ಮ ಎಂದು ತಿಳಿಸಿದರು.
ಇನ್ನು ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ತಾಲೂಕಿನ ವಿವಿಧ ಶಾಲಾ ತಂಡಗಳು, ಕಲಾತಂಡಗಳು, ಅಧಿಕಾರಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ತಾಲೂಕು ಕ್ರೀಡಾಂಗಣದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ಕ್ರೀಡಾಂಗಣದಲ್ಲಿ ಶಾಲಾ ಮಕ್ಕಳಿಂದ ಪಥ ಸಂಚಲನ ಹಾಗೂ ಪೋಲೀಸ್ ಅಧಿಕಾರಿಗಳು ಗೌರವ ರಕ್ಷೆ ನಡೆಯಿತು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ತಾಲೂಕಿನ 7 ಮಂದಿ ಸಾಧಕರನ್ನು ಶಾಸಕ ಕೆ.ಎಂ.ಉದಯ್ ಹಾಗೂ ತಾಲೂಕು ಆಡಳಿತದ ವತಿಯಿಂದ ಗೌರವಿಸಲಾಯಿತು.
ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಾಪಂ ಇಓ ರಾಮಲಿಂಗಯ್ಯ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವೀಶ್, ಬಿಇಓ ಧನಂಜಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್, ಹಿರಿಯ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕಿ ರೇಖಾ, ಕೃಷಿ ಇಲಾಖೆ ಸಹಾಯಕ ನಿರ್ದೆಶಕಿ ಪ್ರತಿಭಾ, ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜ್, ಕಸಾಪ ತಾಲೂಕು ಅಧ್ಯಕ್ಷ ಸುನೀಲ್ ಕುಮಾರ್, ಮುಖಂಡರಾದ ಮರಳಿಗ ಶಿವರಾಜ್, ಆಧೀಶ್, ಕುಮಾರ್, ಸಿದ್ದರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳ್ತೀನಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು








