ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಸಂಕಲ್ಪ ಸಿದ್ಧಿ ಕಾರ್ಯಕ್ರಮದಲ್ಲಿ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಅವಮಾನ ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಸಂಕಲ್ಪ ಸಿದ್ಧಿ ಕಾರ್ಯಕ್ರಮದಲ್ಲಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
ರಾಜ್ಯದ @BSBommai ಸರ್ಕಾರ
ಕೇಂದ್ರ @BJP4India ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ.
1/6#ಹಿಂದಿಹೇರಿಕೆ pic.twitter.com/P1UiDypU7m— Siddaramaiah (@siddaramaiah) August 5, 2022
ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ‘ ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು. ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಎಂದಿದ್ದಾರೆ.
ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ ಅವರು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು? ಎಂದು ಪ್ರಶ್ನಿಸಿದ್ದಾರೆ.
ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು ಎಂದು ಹೇಳಿದ್ದಾರೆ.