ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ – 50ರ ಸಮಾರೋಪ ಸಮಾರಂಭವನ್ನು ಜನೋತ್ಸವವಾಗಿ ಆಚರಿಸಲಾಗುವುದು. ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇಂದಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ರಾಜ್ಯೋತ್ಸವ ಪ್ರಶಸ್ತಿ – 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯ ನಡೆಯಿತು.
ಈ ಸಭೆಯ ಬಳಿಕ ಮಾತನಾಡಿದಂತ ಅವರು, ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟಂಬರ್ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ. ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಸಾಗಿದ್ದು, ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ ಎಂದರು.
ಕರ್ನಾಟಕ ಸುವರ್ಣ ಸoಭ್ರಮ -50 ಸಮಾರೋಪ ಸಮಾರoಭ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಹ ಇದೇ ಸಂದರ್ಭದಲ್ಲಿ ಮಾಡಲಾಗುವುದು. ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆಗೆ ಕಾಮಗಾರಿ ಪ್ರಗತಿಯಲ್ಲಿದೆ. ಬಳ್ಳಾರಿಯಲ್ಲಿ ರಂಜಾನ್ ಸಾಬ್ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ. ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಿಸಲು ಅಂದಾಜು ವೆಚ್ಚ ಸಲ್ಲಿಸಲಾಗಿದೆ. ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಿಸಲಾಗುತ್ತಿದೆ ಎಂದರು.
50 ಸಾಧಕ ಮಹಿಳೆಯರ ಕುರಿತು 100 ಪುಟಗಳ 50ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮೂಲಕ ಮುದ್ರಿಸಲಾಗುವುದು. ವಿಧಾನಸೌಧ ಆವರಣದಲ್ಲಿ 25ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ 1ರಂದು ಅನಾವರಣ ಮಾಡಬೇಕು ಎಂದರು.
ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿಗೆ ಗೋಕಾಕ್ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜನೆ ಮಾಡಲಾಗುತ್ತಿದೆ.
ಕರ್ನಾಟಕ ಸುವರ್ಣ ಸಂಭ್ರಮ- 50ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮನೆ ಮನೆಯಲ್ಲಿ ಕನ್ನಡ ಬಾವುಟವನ್ನು ಹಾರಿಸಲು ಮನವಿ ಮಾಡಲಾಗುವುದು. ಕರ್ನಾಟಕದ ಬಹು ಸಂಸ್ಕೃತಿ, ಸೌಹಾರ್ದ ಸಂಸ್ಕೃತಿ, ಬಹುತ್ವದ ಕುರಿತು 100 ಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡಲಾಗುವುದು ಎಂದರು.
ನಾಡಿನ ಕಲೆ, ಸಾಹಿತ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ ಕುರಿತಾದ 5 ಸಂಪುಟಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸ್ಮರಣ ಸಂಭ್ರಮ ಸಂಪುಟ ಹೊರತರಲಾಗುತ್ತಿದೆ. ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲಾ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್‌ಆರ್‌ಟಿಸಿ ಬಸ್ ಮತ್ತಿತರ ಕಡೆಗಳಲ್ಲಿ ಪ್ರಚುರಪಡಿಸಬೇಕು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಕೊರಗ ಭಾಷೆಯಂತಹ ಸಣ್ಣ ಭಾಷೆಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳಲು ತಜ್ಞರ ಸಮಿತಿ ರಚಿಸುವಂತೆ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮನವಿ ಮಾಡಿದರು.
ಕನ್ನಡ ಮತ್ತು ಸoಸ್ಕೃತಿ ಇಲಾಖೆ ಸಚಿವ ಶಿವರಾಜ ತoಗಡಗಿ, ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಎಸ್.ಆರ್.ಉಮಾಶಂಕರ್, ಇಲಾಖಾ ಕಾರ್ಯದರ್ಶಿ ಅಜಯ ನಾಗಭೂಷಣ್, ವಿವಿಧ ಪ್ರಾಧಿಕಾರ ಹಾಗೂ ಅಕಾಡೆಮಿಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.
ಶೀಘ್ರವೇ ಬೆಂಗಳೂರಿನಲ್ಲಿ US ರಾಯಭಾರಿ ಕಚೇರಿ ಆರಂಭ: ದೆಹಲಿಯಲ್ಲಿ ಪ್ರಿಯಾಂಕ್ ಖರ್ಗೆಗೆ ಎರಿಕ್ ಗಾರ್ಸೆಟಿ ಭರವಸೆ